ಅರಣ್ಯ ಭೂಮಿ ಒತ್ತುವರಿ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಂಗಳವಾರ ಹೇಳಿದ್ದಾರೆ. ಬೆಂಗಳೂರು: ಅರಣ್ಯ ಭೂಮಿ ಒತ್ತುವರಿ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಂಗಳವಾರ ಹೇಳಿದ್ದಾರೆ.
ಕೋಲಾರದಲ್ಲಿ ಭೂ ಒತ್ತುವರಿಯಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬವಾಗುತ್ತಿದೆ ಎಂಬ ವರದಿಗಳಿವೆ. ಆದರೆ, ಈ ವಿಳಂಬಕ್ಕೆ ನ್ಯಾಯಾಲಯಗಳಲ್ಲಿ ಕೆಲವು ಪ್ರಕರಣಗಳಿರುವುದು ಕಾರಣವಾಗಿದೆ, ಆದ್ದರಿಂದ ಎಲ್ಲಾ ಕಾನೂನು ಕಾರ್ಯವಿಧಾನಗಳನ್ನು ಅನುಸರಿಸಬೇಕಾಗುತ್ತದೆ, ಪ್ರಸ್ತುತ ಕೋಲಾರದಲ್ಲಿ 36 ಪ್ರಕರಣಗಳು ನ್ಯಾಯಾಲಯದ ಅಂಗಳದಲ್ಲಿದೆ. ಪಶ್ಚಿಮ ಘಟ್ಟಗಳ ರಕ್ಷಣೆಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡಲಿದೆ ಎಂದು ಹೇಳಿದರು.
ಇದೇ ವೇಳೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧಿಕಾರಿಗಳೊಂದಿಗೂ ಸಚಿವರು ಸಭೆ ನಡೆಸಿದರು. ಈ ವೇಳೆ ಅಧಿಕಾರಿಗಳ ಕಾರ್ಯ ವಿಧಾನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಮಂಡಳಿಯ ಕಾರ್ಯಚಟುವಟಿಕೆಗಳ ಬಗ್ಗೆ ವರದಿ ನೀಡುವಂತೆ ಪರಿಸರ ಮತ್ತು ಅರಣ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದರು.
ಆಡಳಿತ ಮಂಡಳಿಯು ಪರಿಣಾಮಕಾರಿಯಾಗಿ ಮತ್ತು ಪಾರದರ್ಶಕವಾಗಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಲು, ಕಾನೂನು ಚೌಕಟ್ಟಿನಡಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ. ಇದಕ್ಕೂ ಮೊದಲು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.