ಬೆಂಗಳೂರು : ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಿಂದಾಗಿ ತೆರವಾಗಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಹಾಗೂ ಚುನಾವಣೆಯಲ್ಲಿ ಜಯಶಾಲಿಯಾಗಲು ಅಗತ್ಯ ಚುನಾವಣಾ ತಂತ್ರಗಳನ್ನು ರೂಪಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಸ್ತುವಾರಿ ಸಮಿತಿಗಳನ್ನು ನೇಮಕ ಮಾಡಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಂಸದ ಡಿ.ಕೆ.ಸುರೇಶ್, ಶಾಸಕರಾದ ಬಾಲಕೃಷ್ಣ, ಪಿ.ಎಂ.ನರೇಂದ್ರಸ್ವಾಮಿ, ಇಕ್ಬಾಲ್ ಹುಸೇನ್, ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಎಸ್.ರವಿ, ರಾಮನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾಧರ ಅವರನ್ನು ವೀಕ್ಷಕರರಾಗಿ ನೇಮಕ ಮಾಡಲಾಗಿದೆ.
ಸಂಡೂರು ವಿಧಾನಸಭಾ ಕ್ಷೇತ್ರ: ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯಲ್ಲಿ ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್, ಸಂಸದ ಇ.ತುಕಾರಾಂ, ಶಾಸಕರಾದ ಬಿ.ನಾಗೇಂದ್ರ, ಡಾ.ಎನ್.ಟಿ.ಶ್ರೀನಿವಾಸ್, ಮಾಜಿ ಸಚಿವ ಪಿ.ಟಿ.ಪರಮೇಶ್ವರ್ ನಾಯಕ್, ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವಯೋಗಿ ಅವರನ್ನು ವೀಕ್ಷಕರಾಗಿ ನೇಮಕ ಮಾಡಲಾಗಿದೆ.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಂಜೀವ್ ಕುಮಾರ್ ನೀರಲಗಿ ಹಾಗೂ 2024ರ ಲೋಕಸಭಾ ಚುನಾವಣೆಯ ಅಭ್ಯರ್ಥಿ ಆನಂದ ಗಡ್ಡದೇವರಮಠ ಅವರನ್ನು ವೀಕ್ಷಕರಾಗಿ ನೇಮಕ ಮಾಡಲಾಗಿದೆ.
ಸ್ಥಳೀಯ ಸಂಸ್ಥೆಗಳ ಕ್ಷೇತ್ರ: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‍ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವ ರಮಾನಾಥ ರೈ, ಶಾಸಕ ಅಶೋಕ್ ರೈ, ಮಾಜಿ ಸಂಸದ ಡಾ.ಜಯಪ್ರಕಾಶ್ ಹೆಗ್ಡೆ, ಪದ್ಮರಾಜ್, ವಿಧಾನಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, ಉದಯಶೆಟ್ಟಿ, ಕಿಶನ್ ಹೆಗ್ಡೆಯವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.