Home Uncategorized ರಾಜ್ಯಾದ್ಯಂತ ಮುಂದುವರಿದ ಮುಂಗಾರು ಮಳೆ ಆರ್ಭಟ: ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ

ರಾಜ್ಯಾದ್ಯಂತ ಮುಂದುವರಿದ ಮುಂಗಾರು ಮಳೆ ಆರ್ಭಟ: ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ

23
0

ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಮುಂದುವರಿದಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮಳೆ ಮತ್ತೆ ತೀವ್ರಗೊಂಡಿದ್ದು, ಈ ವಾರವೂ ಭಾರೀ ಮಳೆಯ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆಯ(Mansoon rain) ಆರ್ಭಟ ಮುಂದುವರಿದಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮಳೆ ಮತ್ತೆ ತೀವ್ರಗೊಂಡಿದ್ದು, ಈ ವಾರವೂ ಭಾರೀ ಮಳೆಯ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಹಾಸನ, ಧಾರವಾಡ, ದಾವಣಗೆರೆ ಸೇರಿದಂತೆ ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ ಇಂದು ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ 23 ರಿಂದ ಜುಲೈ 28ರ ವರೆಗೆ ಭಾರೀ ಮಳೆಯಾಗಲಿದೆ ಎನ್ನಲಾಗಿದೆ. ಮಂಗಳೂರಿನಿಂದ ಕಾರವಾರದವರೆಗೆ ಕಡಲಿನ ಅಲೆಗಳ ಅಬ್ಬರವು ಜೋರಾಗಲಿದೆ. 3.5 ಯಿಂದ 4 ಮೀಟರ್‌ ಎತ್ತರದವರೆಗೂ ಅಲೆಗಳು ಆರ್ಭಟಿಸಲಿದೆ ಎಂದು ಇಲಾಖೆಯು ತಿಳಿಸಿದೆ.

ಹೀಗಾಗಿ ಮೀನುಗಾರರು, ಸಾರ್ವಜನಿಕರು ಸಮುದ್ರ ದಡದಿಂದ ಆದಷ್ಟು ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 24 ಮತ್ತು 25 ರಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದ್ದು, ಎರಡು ದಿನಗಳ ಕಾಲ ಮಳೆ ಪ್ರಮಾಣ ತಗ್ಗಿದ್ದರೂ ಯೆಲ್ಲೋ ಅಲರ್ಟ್‌ ಮುಂದುವರೆಯಲಿದೆ. 

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದ ಹಿನ್ನೆಲೆ ಜಿಲ್ಲೆಯ ಶಾಲಾ‌, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ಅದೇ ರೀತಿ, ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಮುಂದುವರಿದ ಹಿನ್ನೆಲೆ ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿನ ಶಾಲಾ ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಜುಲೈ 27ರ ವರೆಗೂ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೊಷಿಸಿದೆ. ಅದೇ ರೀತಿ ಯಾದಗಿರಿ, ಹಾಸನ, ಕಲಬರಗಿ, ಬೆಳಗಾವಿ, ಬೀದರ್, ಧಾರವಾಡ​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಇನ್ನುಳಿದಂತೆ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ರಾಯಚೂರು, ವಿಜಯಪುರ, ಬಳ್ಳಾರಿ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಂಚಾರ, ಸಾಮಾನ್ಯ ಜನಜೀವನ ಅಸ್ತವ್ಯಸ್ತ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದು ಸಂಚಾರ ವ್ಯತ್ಯಯವಾಗಿದೆ. ಹಲವೆಡೆ ಸೇತುವೆಗಳು ಹಾಗೂ ಮನೆಗಳಿಗೆ ಹಾನಿಯುಂಟಾಗಿದೆ.

LEAVE A REPLY

Please enter your comment!
Please enter your name here