Home Uncategorized ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ: ನಾಳೆ ರಾಜ್ಯಕ್ಕೆ ಅಮಿತ್ ಶಾ ಭೇಟಿ, ಸಂಪುಟ ವಿಸ್ತರಣೆ ಕುರಿತು...

ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ: ನಾಳೆ ರಾಜ್ಯಕ್ಕೆ ಅಮಿತ್ ಶಾ ಭೇಟಿ, ಸಂಪುಟ ವಿಸ್ತರಣೆ ಕುರಿತು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ

1
0
bengaluru

ರಾಜ್ಯ ವಿಧಾನಸಭಾ ಚುನಾವಣೆ 2023 ಹತ್ತಿರ ಬರುತ್ತಿದ್ದು, ಆಡಳಿತಾಢ ಬಿಜೆಪಿ ಹಾಗೂ ಪ್ರತಿಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿವೆ. ಈ ನಡುವಲ್ಲೇ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಎರಡು ದಿನಗಳ ಕಾಲ ರಾಜ್ಯಕ್ಕೆ ಭೇಟಿ ಕೊಡುತ್ತಿದ್ದು… ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ 2023 ಹತ್ತಿರ ಬರುತ್ತಿದ್ದು, ಆಡಳಿತಾಢ ಬಿಜೆಪಿ ಹಾಗೂ ಪ್ರತಿಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿವೆ. ಈ ನಡುವಲ್ಲೇ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಎರಡು ದಿನಗಳ ಕಾಲ ರಾಜ್ಯಕ್ಕೆ ಭೇಟಿ ಕೊಡುತ್ತಿದ್ದು, ಸಂಪುಟ ವಿಸ್ತರಣೆ ಕುರಿತು ಸ್ಪಷ್ಟ ಚಿತ್ರಗಳು ಸಿಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಅಮಿತ್ ಶಾ ಭೇಟಿ ಕುರಿತು ಮಾಹಿತಿ ನೀಡಿರುವ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 30 ಮತ್ತು 31ರಂದು ರಾಜ್ಯಕ್ಕೆ ಭೇಟಿ ಕೊಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ನವೋತ್ಸಾಹ ತುಂಬಲಿದೆ ಎಂದು ಹೇಳಿದ್ದಾರೆ.

ಅಮಿತ್ ಶಾ ಅವರ ಈ ಭೇಟಿಯು ಪಕ್ಷದ ಗೆಲುವಿನ ಓಟಕ್ಕೆ ಮತ್ತಷ್ಟು ಶಕ್ತಿ ತುಂಬಲಿದೆ. ಮೈಸೂರು ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದಲ್ಲಿ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಅವರ ಭೇಟಿ ಅತ್ಯಂತ ಮಹತ್ವದ್ದಾಗಲಿದೆ ಎಂದು ತಿಳಿಸಿದ್ದಾರೆ.

ಡಿಸೆಂಬರ್​ 30ರಂದು ಮಧ್ಯಾಹ್ನ 12.30ಕ್ಕೆ ಅವರು ಮಂಡ್ಯದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದು ಮೈಸೂರು ಭಾಗದಲ್ಲಿ ಪಕ್ಷವನ್ನು ಹೆಚ್ಚು ಸದೃಢಗೊಳಿಸುವ ವಿಶ್ವಾಸವಿದೆ. ಎಂ. ಸಿ. ರಸ್ತೆಯ ಪ್ರವಾಸಿ ಮಂದಿರದ ಸಮೀಪದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ ಈ ಸಮಾವೇಶ ನಡೆಯಲಿದೆ. ಈ ಸಮಾವೇಶದ ಯಶಸ್ಸಿಗಾಗಿ ಸಚಿವರಾದ ಗೋಪಾಲಯ್ಯ, ನಾರಾಯಣ ಗೌಡ, ಡಾ. ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

bengaluru

ಡಿಸೆಂಬರ್​ 31ರಂದು ಬಿಎಲ್ 2 ಮತ್ತು ಬೂತ್ ಅಧ್ಯಕ್ಷರ ಮೇಲ್ಪಟ್ಟ ಕಾರ್ಯಕರ್ತರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಅಮಿತ್ ಶಾ ಅವರು ಈ ಸಮಾವೇಶದಲ್ಲಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ. ರಾಜ್ಯದಲ್ಲಿ 150ಕ್ಕೂ ಹೆಚ್ಚು ಶಾಸಕ ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೇರುವ ಪಕ್ಷದ ವಿಜಯ ಯಾತ್ರೆಗೆ ಹೆಚ್ಚಿನ ಬಲ ತುಂಬಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದಲ್ಲದೆ, ರಾಜ್ಯ ಬಿಜೆಪಿ ವತಿಯಿಂದ ಜನವರಿ 2 ರಿಂದ ಜನವರಿ 12ರ ವರೆಗೆ ‘ಬೂತ್ ವಿಜಯ ಅಭಿಯಾನ’ವನ್ನು ಆಯೋಜಿಸಲಾಗಿದೆ. ಪಕ್ಷವು ಈಗಾಗಲೇ ಜನಸಂಕಲ್ಪ ಯಾತ್ರೆಗಳ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನೋಪಯೋಗಿ, ಜನಪರ ಕಾರ್ಯಗಳನ್ನು ಜನರಿಗೆ ಮನದಟ್ಟು ಮಾಡಿದೆ. ಅಮಿತ್ ಶಾ ಅವರ ಭೇಟಿಯು ಪಕ್ಷದ ವಿಜಯೋತ್ಸಾಹಕ್ಕೆ ಬಲ ತುಂಬಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ರಾಜ್ಯದಲ್ಲಿರುವ ಪಕ್ಷದ ಕಾರ್ಯಕರ್ತರ ಹಾಗೂ ಮತದಾರರ 50 ಲಕ್ಷ ಮನೆಗಳ ಮೇಲೆ ಬಿಜೆಪಿ ಧ್ವಜ ಹಾರಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯ, ಜಿಲ್ಲಾ, ತಾಲ್ಲೂಕು ಮಾತ್ರವಲ್ಲದೆ ಪಕ್ಷದ ಎಲ್ಲಾ ಘಟಕಗಳು, ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ಯುವ ಅರ್ಹ ಮತದಾರರನ್ನು ಮತಪಟ್ಟಿಯಲ್ಲಿ ಸೇರಿಸಲಾಗುವುದು, ಪ್ರತಿ ಬೂತ್‍ಗಳಲ್ಲಿ ಶೇ.100 ಮತದಾನ ಆಗುವ ರೀತಿಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದು ಹೇಳಿದರು.

20 ಲಕ್ಷ ಕಾರ್ಯಕರ್ತರು ‘ಬೂತ್ ವಿಜಯ ಅಭಿಯಾನ’ದಲ್ಲಿ ಭಾಗವಹಿಸಲಿದ್ದು, ಪ್ರಧಾನಿ ಮೋದಿ “ಮನ್ ಕೀ ಬಾತ್” ವೆಬ್ ಲಿಂಕ್‌ನ್ನು 60 ಸಾವಿರ ಗುಂಪುಗಳು ಡೌನ್‍ಲೋಡ್ ಮಾಡಿಸುವಂತೆ ಪ್ರೇರೇಪಿಸಲಾಗುವುದು. ಅಲ್ಲದೇ ಪ್ರತಿ ಬೂತ್‍ನಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವ ಸಭೆಯನ್ನು ಮಾಡಲಿದ್ದೇವೆ. 58,156 ಬೂತ್‍ಗಳು, 11,642 ಶಕ್ತಿ ಕೇಂದ್ರಗಳು, 1,445 ಮಹಾ ಶಕ್ತಿ ಕೇಂದ್ರಗಳು, 312 ಮಂಡಲಗಳು, 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಈ ಅಭಿಯಾನ ನಡೆಯಲಿದೆ ಎಂದು ಸಚಿವರು ತಿಳಿಸಿದರು.

bengaluru

LEAVE A REPLY

Please enter your comment!
Please enter your name here