ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮೇಲೆ ಲೋಕಾಯುಕ್ತ ದಾಳಿ ನಡೆಸಿ 8 ಕೋಟಿ ರೂಪಾಯಿ ವಶಪಡಿಸಿಕೊಂಡಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರು ಬುಧವಾರ ಹೇಳಿದ್ದಾರೆ. ಬೆಂಗಳೂರು: ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮೇಲೆ ಲೋಕಾಯುಕ್ತ ದಾಳಿ ನಡೆಸಿ 8 ಕೋಟಿ ರೂಪಾಯಿ ವಶಪಡಿಸಿಕೊಂಡಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರು ಬುಧವಾರ ಹೇಳಿದ್ದಾರೆ.
ಬುಧವಾರ ನಡೆದ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೂಪಾಕ್ಷಪ್ಪ ಅವರಿಗೆ ಬಿಜೆಪಿ ನೋಟಿಸ್ ಜಾರಿ ಮಾಡಿದ್ದು, ವಿವರಣೆ ಕೇಳಿದೆ. ಪ್ರಕರಣ ಮುಜುಗರದ ಸಂಗತಿ. ಅದನ್ನು ನಾವು ನಿರಾಕರಿಸುವುದಿಲ್ಲ ಎಂದು ಹೇಳಿದರು.
ಭ್ರಷ್ಟಾಚಾರ ಪ್ರಕರಣ ಸಂಬಂಧ ಬಿಡಬ್ಲ್ಯುಎಸ್‌ಎಸ್‌ಬಿ ಮುಖ್ಯ ಖಾತೆ ಅಧಿಕಾರಿ ಪ್ರಶಾಂತ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದರೂ, ಅವರನ್ನು ಅಮಾನತುಗೊಳಿಸದ ಕುರಿತು ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದರು.
ಈ ವಿಚಾರ “ನನಗೆ ಗೊತ್ತಿಲ್ಲ, 48 ಗಂಟೆಗಳಿಗಿಂತ ಹೆಚ್ಚು ಕಾಲ ಸೆರೆಯಲ್ಲಿದ್ದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಬಿಡಬ್ಲ್ಯುಎಸ್‌ಎಸ್‌ಬಿಗೆ ಸೂಚನೆ ನೀಡಲಾಗುತ್ತದೆ ಎಂದರು.
ಇದೇ ವೇಳೆ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿರುವ ಬಗ್ಗೆ ಬೆಂಗಳೂರಿನ ಕಾಂಗ್ರೆಸ್ ಮತ್ತು ವಕೀಲರ ಸಂಘ ಕಳವಳ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯೆ ನೀಡಲು ಮಾಧುಸ್ವಾಮಿ ಅವರು ನಿರಾಕರಿಸಿದರು.