ಬೆಂಗಳೂರು:
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಚಿತ್ರ ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಇಂದು ತಿರಸ್ಕರಿಸಿದೆ.
ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಅವರನ್ನೊಳಗೊಂಡ ಏಕಸದಸ್ಯ ಪೀಠದ ಮುಂದೆ ಮಂಗಳವಾರ ಜಾಮೀನು ಅರ್ಜಿ ವಿಚಾರಣೆಗೆ ಬಂದಿದ್ದು, ಅರ್ಜಿಯ ವಿಚಾರಣೆ ನಡೆಸಿದ ಪೀಠ ಸಂಜನಾ, ರಾಗಿಣಿ ಸೇರಿದಂತೆ ಸ್ನೇಹಿತ ಪ್ರಶಾಂತ್ ಜಾಮೀನು ಅರ್ಜಿಯನ್ನು ನಿರಾಕರಿಸಿದೆ.
ಈ ಹಿಂದೆ ಸೆ.28 ರಂದು ಇವರ ಜಾಮೀನು ಅರ್ಜಿಗಳನ್ನು ಎನ್ ಡಿಪಿಎಸ್ ವಿಚಾರಣಾ ನ್ಯಾಯಾಲಯ ವಜಾಗೊಳಿಸಿತ್ತು. ಹೀಗಾಗಿ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ಅ.24 ರಂದು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಈ ಮಧ್ಯೆ ಜಾಮೀನು ನೀಡದಂತೆ ಸಿಸಿಬಿ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಹೈಕೋರ್ಟ್ ನೀಡಿರುವ ವಜಾ ಆದೇಶ ಪಡೆದ ಬಳಿಕ, ಸುಪ್ರಿಂ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ನಟಿಯರು ಸಿಸಿಬಿ ದೋಷಾರೋಪ ಪಟ್ಟಿ ಸಲ್ಲಿಕೆ ಆಗುವವರೆಗೂ ಕಾಯಬೇಕು. ಒಂದು ವೇಳೆ ಸುಪ್ರೀಂ ಕೋರ್ಟ್ ನಲ್ಲೂ ಇವರಿಗೆ ಜಾಮೀನು ಸಿಗದಿದ್ದರೆ, ಪರಿಸ್ಥಿತಿ ಮತ್ತಷ್ಟು ಕಷ್ಟವಾಗಲಿದೆ.