ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್.ಕಾಂತರಾಜು ನಡೆಸಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷಾ ವರದಿ ಸಲ್ಲಿಕೆಗೆ ತಡೆ ಕೋರಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ.
ಹೊಳೆನರಸೀಪುರದ ಓದನಹಳ್ಳಿಯ ವಕೀಲ ಓ.ಕೆ.ರಘು ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಮಧ್ಯಂತರ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ರಘು ಪರ ವಕೀಲ ಅಭಿಷೇಕ್ ಕುಮಾರ್, ಮುಖ್ಯ ನ್ಯಾಯಮೂರ್ತಿ ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, ಅರ್ಜಿಯನ್ನು ನಾಳೆ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಮಧ್ಯಂತರ ಅರ್ಜಿಯಲ್ಲಿ ಲೋಕಸಭಾ ಚುನಾವಣೆ ಶೀಘ್ರದಲ್ಲೇ ಘೋಷಣೆ ಆಗಲಿದೆ. ಹೀಗಾಗಿ ಕಾಂತರಾಜು ರಾಜು ವರದಿ ಮಂಡಿಸಲು ಮುಂದಾಗಿದ್ದಾರೆ. ಇದರ ಹಿಂದೆ ರಾಜಕೀಯ ದುರುದ್ದೇಶ ಇವೆ. ಹಾಗಾಗಿ ವರದಿ ಬಹಿರಂಗವಾಗಲು ಅವಕಾಶ ನೀಡದಂತೆ ನಿರ್ಬಂಧಿಬೇಕು ಎಂದು ಮನವಿ ಮಾಡಿದರು.