ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ಒತ್ತಾಯಿಸಲು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಿಜೆಪಿ ಶಾಸಕರು ಶುಕ್ರವಾರ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಲಿದ್ದಾರೆ. ಬೆಂಗಳೂರು: ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ಒತ್ತಾಯಿಸಲು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಿಜೆಪಿ ಶಾಸಕರು ಶುಕ್ರವಾರ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಲಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ, ಬಿಜೆಪಿ ಎಂಎಲ್‌ಸಿ ಕೋಟ ಶ್ರೀನಿವಾಸ ಪೂಜಾರಿ, ಎರಡು ಜಿಲ್ಲೆಗಳ ಎಲ್ಲಾ ಶಾಸಕರು ಮತ್ತು ಎಂಎಲ್‌ಸಿಗಳು ಶುಕ್ರವಾರ ಮಧ್ಯಾಹ್ನ 12.30ಕ್ಕೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗುತ್ತಿದ್ದಾರೆ ಎಂದರು.
ಪ್ರಕರಣವನ್ನು ನಿಭಾಯಿಸಿದ ರೀತಿಯ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ದೂರು ಸಲ್ಲಿಸಲಾಗುವುದು. ಡಿವೈಎಸ್ಪಿ ದರ್ಜೆಯ ಅಧಿಕಾರಿಯೊಬ್ಬರು ಪ್ರಕರಣವನ್ನು ನಿರ್ವಹಿಸುತ್ತಿದ್ದಾರೆ ಎಂದು ಸರ್ಕಾರ ಹೇಳಿದೆ. ಆದರೆ, ಅವರು ಸರ್ಕಾರ ಏನು ಕೇಳಿದರೂ ಕೇಳಬೇಕಾಗುತ್ತದೆ. ಆದ್ದರಿಂದ ಪ್ರಕರಣವನ್ನು ಎಸ್‌ಐಟಿಗೆ ಹಸ್ತಾಂತರಿಸಿ ತನಿಖೆ ನಡೆಸಬೇಕೆಂದು ನಾವು ಬಯಸುತ್ತೇವೆ ಎಂದು ಪೂಜಾರಿ ಹೇಳಿದರು.
ವಾಶ್ ರೂಂನಲ್ಲಿ ಹಿಂದೂ ಯುವತಿಯರ ವಿಡಿಯೋ ರೆಕಾರ್ಡ್ ಮಾಡಿದ ಮೂವರು ಮುಸ್ಲಿಂ ಯುವತಿಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಇದು ಹಿಂದೂ ಹೆಣ್ಣು ಮಕ್ಕಳ ಮೇಲಿನ ಸಂಘಟಿತ ಅಪರಾಧ ಎಂದು ಬಿಜೆಪಿ ಮುಖಂಡರು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಉಡುಪಿ ಕಾಲೇಜು ವಾಶ್‌ರೂಮ್ ವಿಡಿಯೋ ಪ್ರಕರಣ: ತ್ವರಿತವಾಗಿ ಎಫ್ಎಸ್ಎಲ್ ವರದಿ ಕೇಳಿದ ಪೊಲೀಸರು!
ಈ ವಿಷಯದ ಬಗ್ಗೆ ಧ್ವನಿ ಎತ್ತಿದ್ದಕ್ಕಾಗಿ ಮಹಿಳಾ ಕಾರ್ಯಕರ್ತೆ ರಶ್ಮಿ ಸಾಮಂತ್ ಅವರಿಗೆ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆಯು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ದೂರು ನೀಡಲು ಸಿದ್ಧರಿಲ್ಲ ಎಂದು ಪ್ಯಾರಾ ಮೆಡಿಕಲ್ ಕಾಲೇಜು ಸಮರ್ಥಿಸಿಕೊಂಡಿತ್ತು.
ಸಾಕ್ಷ್ಯಾಧಾರಗಳ ಕೊರತೆಯಿಂದ ಪ್ರಕರಣ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಪೊಲೀಸರು ಹೇಳಿದ್ದರು. ಆದರೆ, ಒತ್ತಡಕ್ಕೆ ಮಣಿದ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕೋಮು ಮತ್ತು ರಾಜಕೀಯ ತಿರುವು ಪಡೆದುಕೊಂಡಿರುವ ಪ್ರಕರಣದ ಪರಿಶೀಲನೆಗಾಗಿ ನಟಿ ಹಾಗೂ ರಾಜಕಾರಣಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಉಡುಪಿಗೆ ಆಗಮಿಸಿದ್ದರು. ಈ ವೇಳೆ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಇದನ್ನೂ ಓದಿ: ಉಡುಪಿ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಎಸ್‌ಐಟಿಗೆ ವಹಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣವನ್ನು ಎಸ್‌ಐಟಿಗೆ ಹಸ್ತಾಂತರಿಸುವುದನ್ನು ತಳ್ಳಿಹಾಕಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಡಿವೈಎಸ್ಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ‘ಕೇಂದ್ರ ಮಹಿಳಾ ಆಯೋಗದ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಲೇಜು ಶೌಚಾಲಯದಲ್ಲಿ ಕ್ಯಾಮೆರಾ ಅಳವಡಿಸಿಲ್ಲ ಎಂದು ಹೇಳಿದ್ದಾರೆ. ತನಿಖಾ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದರು.