ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆದು, ತುಷ್ಠೀಕರಣದ ಉದ್ದೇಶದಿಂದ ರಾಜ್ಯ ಶಿಕ್ಷಣ ನೀತಿ (ಎಸ್ಇಪಿ) ಜಾರಿಗೊಳಿಸಲು ಮುಂದಾಗಿರುವುದು ಖಂಡನೀಯ. ಸರ್ಕಾರದ ಈ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳ ಆಂದೋಲನ ರೂಪಿಸಲಾಗುವುದು ಎಂದು ವಿಧಾನಸಭೆ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಉದ್ದೇಶದಿಂದ ರೂಪಿಸಲಾಗಿದೆ.
ಆದರೆ, ಇದೀಗ ಸಿದ್ದರಾಮಯ್ಯ ಸರ್ಕಾರ ಪಠ್ಯಪುಸ್ತಕಗಳ ಪರೀಷ್ಕರಣೆ ಮಾಡುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿಯೂ ರಾಜಕೀಯ ತೂರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜ್ಯುಕೇಶನ್ ಸಂಘಟನೆಯೊಂದಿಗೆ ಸೇರಿ ರಾಜ್ಯಾದ್ಯಂತ ವಿದ್ಯಾರ್ಥಿಗಳ ಸಮ್ಮೇಳನ, ಜಾಗೃತಿ ಶಿಬಿರಗಳನ್ನು ಆಯೋಜಿಸುವ ಮೂಲಕ ಎಸ್ಇಪಿ ವಿರುದ್ಧ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು. ಎಸ್ಇಪಿ ಅಂದರೆ ಸೋನಿಯಾ ಗಾಂಧಿ ಶಿಕ್ಷಣ ನೀತಿ ಎಂಬಂತಾಗಿದೆ. ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸುವ ಶಿಕ್ಷಣ ವಿರೋಧಿಸುತ್ತ ಕಾಂಗ್ರೆಸ್ ಸರ್ಕಾರವು ತನ್ನ ಚುನಾವಣೆ ಪ್ರಣಾಳಿಕೆಯಲ್ಲಿಯೇ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳ ಪರಿಷ್ಕರಣೆ ಕುರಿತು ಪ್ರಸ್ತಾಪಿಸಿತ್ತು. ಇದೀಗ ಅದನ್ನು ಕಾರ್ಯಗತಗೊಳಿಸುತ್ತಿದೆ ಎಂದರು.
ಪಠ್ಯಪುಸ್ತಕಗಳ ಪರಿಷ್ಕರಣೆಗೆ ಒಂದು ನಿಯಮ ಇದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ತಜ್ಞರ ಸಮಿತಿ ರಚಿಸಿ, ಶಿಕ್ಷಣ ಪರಿಣಿತರ ಅಭಿಪ್ರಾಯ ಪಡೆದುಕೊಂಡು ಎನ್ಇಪಿ ಜಾರಿಗೊಳಿಸಲಾಗಿತ್ತು. ಆದರೆ, ಇದೀಗ ಕಾಂಗ್ರೆಸ್ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣಗೊಳಿಸಿ, ನೆಪಮಾತ್ರಕ್ಕೆ ಸಮಿತಿ ಜಾರಿಗೊಳಿಸಿದೆ. ಸಿದ್ದರಾಮಯ್ಯ ಎಡಪಂಕ್ತಿ ಬುದ್ಧಿಜೀವಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವುದು ಇದರಿಂದ ಸಾಬೀತಾಗುತ್ತದೆ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಸಂಪುಟದ ಅನೇಕ ಸಚಿವರು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪಾಠಗಳನ್ನು ಮಾಡಲಾಗುತ್ತಿದೆ. ಎಸ್ಇಪಿ ಜಾರಿಗೊಳಿಸುವುದಿದ್ದರೆ ಮೊದಲು ಅವರ ಸಚಿವರ ಶಿಕ್ಷಣ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸಲಿ ಎಂದು ಕಾಗೇರಿ ಸವಾಲು ಹಾಕಿದರು. ರಾಜ್ಯ ಸರ್ಕಾರದ ಪಠ್ಯಪುಸ್ತಕ ಹಾಳುಗೆಡುವಿದ ಕುರಿತು ಪೀಪಲ್ಸ್ ಪೋರಮ್ ಫಾರ್ ಕರ್ನಾಟಕ ಎಜ್ಯುಕೇಶನ್ ವತಿಯಿಂದ ಇದೇ ಸಂದರ್ಭದಲ್ಲಿ ಮೀಮ್ಸ್ ಬಿಡುಗಡೆಗೊಳಿಸಲಾಯಿತು.
ಶಾಸಕರಾದ ಅರವಿಂದ ಬೆಲ್ಲದ, ಪ್ರದೀಪ ಶೆಟ್ಟರ್, ಶಿಕ್ಷಣ ತಜ್ಞರಾದ ರವಿ ದಂಡಿನ, ಸುಧೀಂದ್ರ ದೇಶಪಾಂಡೆ, ಬಿಜೆಪಿ ವಕ್ತಾರ ರವಿ ನಾಯಕ,ಎಬಿವಿಪಿಯ ಮಣಿಕಂಠ ಕಳಸ ಸುದ್ದಿಗೋಷ್ಠಿಯಲ್ಲಿ ಇದ್ದರು.
The post ಎಸ್ಇಪಿ ವಿರುದ್ಧ ವಿದ್ಯಾರ್ಥಿ ಉಗ್ರ ಸ್ವರೂಪದ ಹೋರಾಟ: ವಿಶ್ವೇಶ್ವರ ಹೆಗಡೆ ಕಾಗೇರಿ appeared first on Ain Live News.