Home Uncategorized ಒಬ್ಬೇ ಒಬ್ಬ ಬಿಜೆಪಿ ಸಂಸದ ರಾಜ್ಯಕ್ಕೆ ಒಂದೇ ಒಂದು ರೂ. ಬರ ಪರಿಹಾರ ತರಲಿಲ್ಲ: ಸಿದ್ದರಾಮಯ್ಯ...

ಒಬ್ಬೇ ಒಬ್ಬ ಬಿಜೆಪಿ ಸಂಸದ ರಾಜ್ಯಕ್ಕೆ ಒಂದೇ ಒಂದು ರೂ. ಬರ ಪರಿಹಾರ ತರಲಿಲ್ಲ: ಸಿದ್ದರಾಮಯ್ಯ ವಾಗ್ದಾಳಿ

27
0

ಪಿರಿಯಾಪಟ್ಟಣ: ರಾಜ್ಯದ ಜನ, ಪ್ರತಾಪ ಸಿಂಹರನ್ನೊಳಗೊಂಡಂತೆ 25 ಮಂದಿ ಎಂಪಿಗಳನ್ನು ಗೆಲ್ಲಿಸಿದರು. ಒಬ್ಬೇ ಒಬ್ಬ ಬಿಜೆಪಿ ಸಂಸದರು ರಾಜ್ಯಕ್ಕೆ ಒಂದೇ ಒಂದು ರೂಪಾಯಿ ಬರ ಪರಿಹಾರ ತರಲಿಲ್ಲ, “ಮಿಸ್ಟರ್ ಪ್ರತಾಪ್ ಸಿಂಹ ಏಕೆ ಒಂದೇ ಒಂದು ರೂಪಾಯಿ ತರಲಿಲ್ಲ. ಇಷ್ಟು ಎಂಪಿಗಳಿದ್ದು ನಾಚಿಕೆ ಆಗುವುದಿಲ್ಲವೇ?” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಕಾವೇರಿ ನದಿಯ ನೀರು ಕೆರೆ-ಕಟ್ಟೆಗಳಿಗೆ ತುಂಬಿಸುವ ಯೋಜನೆಯನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು. ನಮ್ಮ ಸರಕಾರದ ಒಂದು ಯೋಜನೆ ಕೋಲಾರ, ಚಿಕ್ಕಬಳ್ಳಾಪುರದ ಕೆರೆಗಳಿಗೆ ಮರು ಹುಟ್ಟು ನೀಡಿದೆ. ಇದೇ ರೀತಿ ಪಿರಿಯಾಪಟ್ಟಣದ ಕೆರೆಗಳಿಗೆ ಮರು ಜೀವ ನೀಡಿ ಇಲ್ಲಿನ ಅಂತರ್ಜಲ ವೃದ್ಧಿಗೆ ಈ ಯೋಜನೆ ಜೀವದಾನವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ನುಡಿದಂತೆ ನಡೆಯೋದು, ಕೊಟ್ಟ ಮಾತಿನಂತೆ ನಡೆದುಕೊಳ್ಳುವುದು ನಮ್ಮ ಕಾಂಗ್ರೆಸ್ ಸರಕಾರದ ಸಂಸ್ಕಾರ. ಬಿಜೆಪಿ ಕೊಟ್ಟ ಮಾತುಗಳಲ್ಲಿ ಯಾವುದನ್ನೂ ಈಡೇರಿಸಿಲ್ಲ ಎಂದು ದೂರಿದರು. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಜನ ಜಾನವಾರುಗಳಿಗೆ ಕುಡಿಯುವ ನೀರಿಗೆ ತೊಂದರೆ ಆಗದಂತೆ, ಜನರು ಗುಳೆ ಹೋಗದಂತೆ ತಡೆದಿದ್ದೇವೆ. ಇದು ನಮ್ಮ ಸಾಧನೆ ಎಂದು ಸಿದ್ದರಾಮಯ್ಯ ಹೇಳಿದರು.

ಕಳೆದ ವರ್ಷ ಸೆಪ್ಟೆಂಬರ್ ನಿಂದ ಇವತ್ತಿನವರೆಗೂ ನಾವು ರಾಜ್ಯದ ಪಾಲಿನ ಬರ ಪರಿಹಾರದ ಹಣವನ್ನು ಕೊಡಿ ಎಂದು ಕೇಂದ್ರಕ್ಕೆ ಪತ್ರ ಬರೆಯುತ್ತಿದ್ದೇವೆ. ನಾವೇ ಖುದ್ದಾಗಿ ಹೋಗಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡಿದರೂ ಕೇಂದ್ರ ಸರಕಾರ ಒಂದೇ ಒಂದು ರೂಪಾಯಿಯನ್ನು ರಾಜ್ಯಕ್ಕೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಚ್.ಡಿ. ದೇವೇಗೌಡ ಅವರು ಈಗ ಪ್ರಧಾನಿ ಮೋದಿ ಮತ್ತು ಬಿಜೆಪಿ ಜತೆ ತಮ್ಮ ಅಸ್ತಿತ್ವಕ್ಕಾಗಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಪ್ರಧಾನಿಗಳಿಗೆ ಹೇಳಿ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ಬರ ಪರಿಹಾರವನ್ನು ದೊರಕಿಸಿ ಕೊಡಲಿ. ಜಾತ್ಯತೀತ ಎಂದು ಪಕ್ಷದ ಹೆಸರಿಟ್ಟುಕೊಂಡು ಈಗ ಕೋಮುವಾದಿಗಳ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಸಿಎಂ ಟೀಕಿಸಿದರು.

ರಾಜ್ಯದ ಒಂದು ಕೋಟಿ 30 ಲಕ್ಷ ಕುಟುಂಬಗಳ ನಾಲ್ಕೂವರೆ ಕೋಟಿ ಜನರಿಗೆ ಪ್ರತೀ ತಿಂಗಳು 4 ರಿಂದ 6 ಸಾವಿರ ರೂಪಾಯಿ ಕೈ ಸೇರುವ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದೇವೆ. ಇಲ್ಲಿಯವರೆಗೂ 139 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು ಜಮೆ ಆಗುತ್ತಿದೆ. ನಾವು ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೇಳಿದರು.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ವಿಫಲರಾದರು. ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆಗಲಿಲ್ಲ, ಈ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಒತ್ತಿ ಹೇಳಿದರು.

ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ. ನಾವೂ ರಾಮನನ್ನು ಭಜಿಸುತ್ತೇವೆ. ಆದರೆ ಜನರಿಗೆ ಮಾಡಿದ ಜನದ್ರೋಹವನ್ನು ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟು ರಾಜಕೀಯ ಮಾಡುತ್ತಿರುವ ಬಿಜೆಪಿಯನ್ನು ಕ್ಷಮಿಸಬೇಡಿ, ಬೆಂಬಲಿಸಬೇಡಿ ಎಂದು ಎನ್ನ ಎಕ್ಸ್ ಖಾತೆಯಲ್ಲಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಮೊದಲ ಬಾರಿ ಸಿಎಂ ಆಗಿದ್ದಾಗ ಪಿರಿಯಪಟ್ಟಣದ ಜನರಿಗಾಗಿ, ಕೃಷಿ ಚಟುವಟಿಕೆಗಳಿಗಾಗಿ ಮತ್ತು ಅಂತರ್ಜಲ ಹೆಚ್ಚಳಕ್ಕಾಗಿ ಸಿದ್ದರಾಮಯ್ಯ ನವರೇ ಶಂಕುಸ್ಥಾಪನೆ ಮಾಡಿದ್ದ ಯೋಜನೆಯನ್ನು ಇದೀಗ ಅವರೇ ಉದ್ಘಾಟಿಸಿದ್ದಾರೆ. ಈ ಯೋಜನೆಯಿಂದ ಪಿರಯಾಪಟ್ಟಣದ 79 ಹಳ್ಳಿಗಳ 93 ಸಾವಿರ ಜನರಿಗೆ ಇದರಿಂದ ಲಾಭವಾಗಲಿದೆ.

LEAVE A REPLY

Please enter your comment!
Please enter your name here