ರಾಘವೇಂದ್ರ ಔರಾದ್ಕರ್ ಸಮಿತಿಯ ವರದಿಯ ಶಿಫಾರಸುಗಳನ್ನು ಯಥಾವತ್ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶನಿವಾರ ಹೇಳಿದರು. ಮೈಸೂರು: ರಾಘವೇಂದ್ರ ಔರಾದ್ಕರ್ ಸಮಿತಿಯ ವರದಿಯ ಶಿಫಾರಸುಗಳನ್ನು ಯಥಾವತ್ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶನಿವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಔರಾದ್ಕರ್ ವರದಿಯ ಶಿಫಾರಸಿನಂತೆ ಪೊಲೀಸ್ ಸಿಬ್ಬಂದಿಗೆ ಕಡ್ಡಾಯ ವಾರದ ರಜೆ ಜಾರಿಗೊಳಿಸುತ್ತೇವೆ. ರಾತ್ರಿ ಪಾಳಿ ಮಾಡಿದವರಿಗೆ ವಿಶೇಷ ಭತ್ಯೆ ಕೊಡುವ ವಿಚಾರದಲ್ಲೂ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
‘ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆ ಖಾಲಿ ಇವೆ. ಅವುಗಳ ಭರ್ತಿ ಕಾರ್ಯ ಶುರುವಾಗಿದೆ. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳು ಖಾಲಿ ಇವೆ. ಮೊದಲ ಹಂತದಲ್ಲಿ 4 ಸಾವಿರ ಪೊಲೀಸ್ ಕಾನ್‌ಸ್ಟೆಬಲ್, 400 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಮುಂದಾಗಿದ್ದೇವೆ’ ಎಂದು ತಿಳಿಸಿದರು.
‘ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಅಕ್ರಮ ಕುರಿತು ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ, ಸರ್ಕಾರದ ಅಭಿಪ್ರಾಯ ಕೇಳಿದೆ. ಜುಲೈ 5ರಂದು ನ್ಯಾಯಾಲಯಕ್ಕೆ ವರದಿ ನೀಡಲಿದ್ದೇವೆ’ ಎಂದು ಮಾಹಿತಿ ನೀಡಿದರು.