ಮುಜರಾಯಿ ಇಲಾಖೆ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ. ಬೆಂಗಳೂರು: ಮುಜರಾಯಿ ಇಲಾಖೆ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ.
ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ್ದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾದಿವಂತರ ಒಕ್ಕೂಟದ ಸದಸ್ಯರು ಈ ಬಗ್ಗೆ ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ: ದೇಗುಲಗಳ ತ್ಯಾಜ್ಯ ನಿರ್ವಹಣೆಗೆ ʻಸ್ವಚ್ಛ ಮಂದಿರ ಅಭಿಯಾನʼ ಆರಂಭಕ್ಕೆ ಮುಜರಾಯಿ ಇಲಾಖೆ ಮುಂದು!
ದೇವಾಲಯಗಳಲ್ಲಿ ದರ್ಶನಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಿದೆ, ಇದರಿಂದ ಹಿರಿಯ ನಾಗರಿಕರಿಗೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟವಾಗುತ್ತಿದೆ. ಇವರು ತಮ್ಮ ವಯಸ್ಸಿನ ದಾಖಲೆ ಅಥವಾ ಆಧಾರ್ ಕಾರ್ಡ್ ಅನ್ನು ತೋರಿಸಿದರೆ, ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸ್ಥಳಾವಕಾಶ ಇದ್ದರೆ ಪ್ರತ್ಯೇಕ ಸ್ಥಳ ಕಾಯ್ದಿರಿಸುವಂತೆಯೂ ಸೂಚಿಸಲಾಗಿದೆ.
ದೇವಾಲಯಗಳಲ್ಲಿ ಹಿರಿಯ ನಾಗರಿಕರಿಗಾಗಿ ಸಹಾಯ ಕೇಂದ್ರವನ್ನು ಸ್ಥಾಪಿಸಿ, ಜವಾಬ್ದಾರಿಯುತ ಸಿಬ್ಬಂದಿಯನ್ನು ನಿಯೋಜಿಸಿ ದೇವರ ದರ್ಶನದ ವ್ಯವಸ್ಥೆ ಮಾಡಬೇಕು ಎಂದೂ ಸುತ್ತೋಲೆಯಲ್ಲಿ ವಿವರಿಸಲಾಗಿದೆ.
ಇದನ್ನೂ ಓದಿ: ಕರ್ನಾಟಕ ಬಜೆಟ್ 2022: ಮುಜರಾಯಿ ಇಲಾಖೆಗೆ ಪ್ರಮುಖ ಘೋಷಣೆಗಳು; ರಿಯಾಯಿತಿ ದರದಲ್ಲಿ ಯಾತ್ರಾ ಪ್ಯಾಕೇಜ್
ಹಿರಿಯ ನಾಗರಿಕರು 202 ಪ್ರವರ್ಗ ‘ಎ’ ಮತ್ತು 156 ವರ್ಗ ‘ಬಿ’ ಗೆ ಸೇರಿದ ಮುಜರಾಯಿ ಇಲಾಖೆಯ ಒಟ್ಟು 358 ದೇವಸ್ಥಾನಗಳಲ್ಲಿ ಸರದಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ದರ್ಶನ ಪಡೆಯಬಹುದಾಗಿದೆ.
ಇದರಲ್ಲಿ ಬೆಂಗಳೂರಿನ ದೊಡ್ಡ ಗಣಪತಿ, ಬನಶಂಕರಿ ಮತ್ತು ಧರ್ಮರಾಯ ಸ್ವಾಮಿ ದೇವಸ್ಥಾನಗಳು, ದಕ್ಷಿಣ ಕನ್ನಡದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಬೆಳಗಾವಿಯ ರೇಣುಕಾ ಯಲ್ಲಮ್ಮ ದೇವಸ್ಥಾನಗಳು ಸೇರಿವೆ.