ಮಂಗಳೂರು, ಡಿ.28: ಮಂಡ್ಯದಲ್ಲಿ ಮುಸ್ಲಿಮ್ ಮಹಿಳೆಯರ ಬಗ್ಗೆ ಅತ್ಯಂತ ಅವಹೇಳನಕಾರಿ ಹೇಳಿಕೆ ನೀಡಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ರನ್ನು ಯಾವುದೇ ವಿಳಂಬವಿಲ್ಲದೆ ಕೂಡಲೇ ಬಂಧಿಸಿ ಸೂಕ್ತ ಕಾನೂನಿನ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಪಕ್ಷಗಳ ಸಂಘಟನೆಗಳ ಜಂಟಿ ವೇದಿಕೆ ರಾಜ್ಯ ಸರಕಾರವನ್ನು ಆಗ್ರಹಿಸಿದೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಂಟಿ ವೇದಿಕೆಯ ಅಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಕಲ್ಲಡ್ಕ ಪ್ರಭಾಕರ ಭಟ್ ಭಾಷಣದಲ್ಲಿ ಮುಸ್ಲಿಮ್ ಮಹಿಳೆಯರ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದ್ದು ಮಾತ್ರವಲ್ಲ ಇಡೀ ಮಹಿಳಾ ಸಮೂಹಕ್ಕೆ ಅಪಮಾನ ಮಾಡಿದ್ದಾರೆ. ಮಹಿಳೆಯರ ಬಗ್ಗೆ ಕೆಟ್ಟ ರೀತಿಯಲ್ಲಿ ಮಾತನಾಡುವ ಚಾಳಿ ಮುಂದುವರಿಸಿರುವ ಪ್ರಭಾಕರ ಭಟ್ ವಿರುದ್ಧ ಈಗಾಗಲೇ ಶ್ರೀರಂಗಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರನ್ನು ಸರಕಾರ ತಕ್ಷಣ ಬಂಧಿಸಲಿ ಎಂದು ಒತ್ತಾಯಿಸಿದರು.
ಪ್ರಭಾಕರ ಭಟ್ ಭಾಷಣದ ಹಿಂದೆ ಕೋಮು ದ್ವೇಷದ ಬೀಜ ಬಿತ್ತುವ ಹುನ್ನಾರ ಇದೆ. ಅವರ ಹೇಳಿಕೆಯನ್ನು ನಾಗರಿಕ ಸಮಾಜ ಒಪ್ಪಲು ಸಾಧ್ಯವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತದಲ್ಲಿರುವ ಹಿನ್ನೆಲೆಯಲ್ಲಿ ಹತಾಶೆಗೊಂಡಿರುವ ಪ್ರಭಾಕರ ಭಟ್ ರಾಜಕೀಯ ಲಾಭಕ್ಕಾಗಿ ಕೋಮು ಪ್ರಚೋದಕ ಭಾಷಣ ಮಾಡುತ್ತಿದ್ದಾರೆ ಎಂದು ರೈ ಹೇಳಿದರು.
ಪ್ರಭಾಕರ ಭಟ್ ರ ಹೇಳಿಕೆಯನ್ನು ತಿರುಚಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿಕೆ ಕೊಟ್ಟಿದ್ದಾರೆ. ಭಟ್ಟರ ಹೇಳಿಕೆಯನ್ನು ಯಾವ ರೀತಿ ತಿರುಚಲಾಗಿದೆ ಎಂದು ನಳಿನ್ ಕುಮಾರ್ ಸ್ಪಷ್ಟಪಡಿಸಲಿ ಎಂದು ರೈ ಸವಾಲು ಹಾಕಿದರು.
ವೇದಿಕೆಯ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮಾತನಾಡಿ, ಕಲ್ಲಡ್ಕ ಪ್ರಭಾಕರ ಭಟ್ ಅವರ ಶೀಘ್ರ ಬಂಧನವಾಗಲಿ. ಯಾವುದೇ ಕಾರಣಕ್ಕೂ ಅವರಿಗೆ ಜಾಮೀನು ಸಿಗಬಾರದು ಎಂದರು.
ಸುದ್ದಿಗೋಷ್ಠಿಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಶೇಖರ್, ದಸಂಸ ರಾಜ್ಯ ಸಂಚಾಲಕ ಎಂ.ದೇವದಾಸ್, ಹಿರಿಯ ಸಾಮಾಜಿಕ ಹೋರಾಟಗಾರ ಎಂ.ಜಿ.ಹೆಗಡೆ, ತುಳು ಪರಿಷತ್ ಕೋಶಾಧಿಕಾರಿ ಸುಬೋದ್ ಆಳ್ವ, ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ ಮತ್ತಿತರರು ಉಪಸ್ಥಿತರಿದ್ದರು.