Home Uncategorized ‘ಗೃಹ ಲಕ್ಷ್ಮಿ ಯೋಜನೆಗೆ ನೆರವು’: ನಾಳೆಯಿಂದ (ಡಿ.27) ಮೂರು ದಿನ ಗ್ರಾ.ಪಂ. ಕಚೇರಿಗಳಲ್ಲಿ ವಿಶೇಷ ಶಿಬಿರ

‘ಗೃಹ ಲಕ್ಷ್ಮಿ ಯೋಜನೆಗೆ ನೆರವು’: ನಾಳೆಯಿಂದ (ಡಿ.27) ಮೂರು ದಿನ ಗ್ರಾ.ಪಂ. ಕಚೇರಿಗಳಲ್ಲಿ ವಿಶೇಷ ಶಿಬಿರ

26
0

ಬೆಂಗಳೂರು: ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೆ ಪರಿಹಾರ ಒದಗಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27 ರಿಂದ 29ರವರೆಗೆ ಮೂರು ದಿನಗಳ ಕಾಲ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿಶೇಷ ಶಿಬಿರ ಆಯೋಜಿಸಲಾಗಿದೆ.

ಗೃಹ ಲಕ್ಷ್ಮಿ ಯೋಜನೆಯಡಿ ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇ-ಕೆವೈಸಿ ಅಪ್ಡೆಟ್, ಹೊಸ ಬ್ಯಾಂಕ್ ಖಾತೆ ಆರಂಭ ಸೇರಿದಂತೆ ಹಲವು ಸಮಸ್ಯೆಗಳನ್ನು ಮಹಿಳೆಯರು ಎದುರಿಸುತ್ತಿದ್ದಾರೆ. ಈ ತೊಂದರೆಗಳನ್ನು ಪರಿಹರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಜಮಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಈ ಶಿಬಿರವನ್ನು ಆಯೋಜಿಸಲಾಗಿದೆ.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ನಡೆಯಲಿರುವ ಈ ಶಿಬಿರಗಳಲ್ಲಿ ಬಾಪೂಜಿ ಸೇವಾ ಕೇಂದ್ರದ ಗಣಕಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ (ಇ.ಡಿ.ಸಿ) ತಂಡಗಳು ಭಾಗವಹಿಸಲಿವೆ.

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್‍ಗಳ ಪ್ರತಿನಿಧಿಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಶಿಬಿರದಲ್ಲಿಯೇ ಪರಿಹರಿಸಲಾಗುವುದು, ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವ ಗೃಹಲಕ್ಷ್ಮಿ ಫಲಾನುಭವಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳು ತಮ್ಮ ಹಾಗೂ ಪತಿಯ ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಪಾಸ್‍ಬುಕ್ ದಾಖಲೆಗಳೊಂದಿಗೆ ಶಿಬಿರಕ್ಕೆ ಬರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here