ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮೈದಾನದಲ್ಲಿ ಎಲ್ಲಾ ಹಬ್ಬವೂ ಆಚರಿಸಲಾಗುತ್ತದೆ ಎಂದು ಸಂಸದ ಪಿ.ಸಿ. ಮೋಹನ್ ಅವರು ಗುರುವಾರ ಹೇಳಿದರು. ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮೈದಾನದಲ್ಲಿ ಎಲ್ಲಾ ಹಬ್ಬವೂ ಆಚರಿಸಲಾಗುತ್ತದೆ ಎಂದು ಸಂಸದ ಪಿ.ಸಿ. ಮೋಹನ್ ಅವರು ಗುರುವಾರ ಹೇಳಿದರು.
ಚಾಮರಾಜ ಪೇಟೆ ಮೈದಾನದಲ್ಲಿ ವರ್ಷಕ್ಕೆರಡು ಬಾರಿ ಮುಸ್ಲಿಮರ ಸಾಮೂಹಿಕ ಪ್ರಾರ್ಥನೆ ಬಿಟ್ಟರೆ ಬೇರೆ ಯಾವ ಕಾರ್ಯಕ್ರಮವೂ ನಡೆಯುತ್ತಿರಲಿಲ್ಲ. ಈ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು ಎಂಬ ಅಂಶ ಚರ್ಚೆಗೆ ಬಂದ ಬಳಿಕ ಇಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂಬ ಬೇಡಿಕೆ ಕೇಳಿಬಂದಿತ್ತು.
ಆದರೆ, ಸ್ವಾತಂತ್ರ್ಯ ದಿನಾಚರಣೆ ಬದಲಿಗೆ ಇದೀಗ ಗಣರಾಜ್ಯೋತ್ಸವ ಆಚರಣೆಗೆ ಅಧಿಕಾರಿಗಳು ಅನುಮತಿ ನೀಡಿದ್ದು, ಇಂದು ವಿವಾದಿತ ಮೈದಾನದಲ್ಲಿ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಅತ್ಯಂತ ಬಿಗಿ ಭದ್ರತೆಯ ನಡುವೆ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರಾದ ಜಮೀರ್ ಅಹ್ಮದ್, ಸಂಸದರಾದ ಪಿಸಿ ಮೋಹನ್ ಭಾಗಿಯಾಗಿದ್ದರು.
ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಿಸಿ ಮೋಹನ್ ಅವರು, ʻʻಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಇದೇ ಮೊದಲು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸ್ವಾತಂತ್ರೋತ್ಸವ ಮತ್ತು ಗಣರಾಜ್ಯೋತ್ಸವ ಸಂಭ್ರಮ ಆಚರಿಸುತ್ತಿದ್ದೇವೆ. ಮುಂಬರುವ ದಿನಗಳಲ್ಲಿ ಇನ್ನೂ ಅದ್ಧೂರಿಯಾಗಿ ಸಂಭ್ರಮಾಚರಣೆ ಮಾಡುತ್ತೇವೆ. ಮಾತ್ರವಲ್ಲ, ಮುಂದಿನ ದಿನಗಳಲ್ಲಿ ಎಲ್ಲಾ ಸಂಸ್ಕೃತಿಕ ಹಬ್ಬಗಳನ್ನು ಆಚರಣೆ ಮಾಡಲಿದ್ದೇವೆ. ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು.
ಬಳಿಕ ಜಮೀರ್ ಅಹ್ಮದ್ ಖಾನ್ ಅವರು ಮಾತನಾಡಿ, ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿ ಕಂದಾಯ ಇಲಾಖೆಗೆ, ಮುಖ್ಯ ಮಂತ್ರಿಗಳಿಗೆ ಹಿಂದೆಯೇ ಪತ್ರ ಬರೆದಿದ್ದೆ. ಗಣರಾಜ್ಯೋತ್ಸವ ಆಚರಣೆ ಮಾಡಿದ್ದು ತುಂಬಾ ಖುಷಿ ಆಗುತ್ತಿದೆ ಎಂದು ಹೇಳಿದರು.
ಬಳಿಕ ಹಿಂದು ಹಬ್ಬಗಳ ಆಚರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಗರಂ ಆದ ಅವರು, ಭೂಮಿ ನನ್ನ ಸ್ವತ್ತಲ್ಲ. ಕಂದಾಯ ಇಲಾಖೆ ಸ್ವತ್ತು. ಈ ಬಗ್ಗೆ ಕಂದಾಯ ಸಚಿವರನ್ನು ಕೇಳಿ. ನನ್ನನ್ಯಾಕೆ ಕೇಳ್ತೀರಿ ಎಂದರು.