ಉಡುಪಿ, ಜೂ.11: ಸುಮಾರು ನಾಲ್ಕು ತಿಂಗಳ ಬಳಿಕ ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನಾಳೆ ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ.
ಜೂ.12ರಂದು ಬೆಳಗ್ಗೆ 10:30ಕ್ಕೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುವ ಸಚಿವರು 12:00ಗಂಟೆಗೆ ಉಡುಪಿಗೆ ಆಗಮಿಸಿ, ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸುವರು. ಬಳಿಕ ಸಂಜೆ 4:00ಗಂಟೆಗೆ ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ 6ಗಂಟೆಗೆ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
ಕಳೆದ ಮಾ.13ರಂದು ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಇತರ ಸಚಿವರೊಂದಿಗೆ ಭಾಗವಹಿಸಿದ ಬಳಿಕ ಹೆಬ್ಬಾಳ್ಕರ್ ಉಡುಪಿಗೆ ಆಗಮಿಸಿಲ್ಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಾಗಲೀ, ವಿಧಾನಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಸಮಯದಲ್ಲಾಗಲೀ ಪಕ್ಷದ ಪ್ರಚಾರಕ್ಕೆ ಆಗಮಿಸದ ಸಚಿವೆಯ ನಡೆ ಸ್ವಪಕ್ಷೀಯರಿಂದ ತೀವ್ರ ಟೀಕೆಗೆ ಗುರಿಯಾಗಿತ್ತು.