ದಾವಣಗೆರೆ: ದಾವಣಗೆರೆ ದಕ್ಷಿಣ ಮತಕ್ಷೇತ್ರದ ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಬಿಜೆಪಿ ಅಭ್ಯರ್ಥಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ.ದಾಸಕರಿಯಪ್ಪ ಅವರು ಶುಕ್ರವಾರ ದಾವಣಗೆರೆ ಪಾಲಿಕೆಗೆ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದು, 5.76 ಕೋಟಿ ರೂ.ಗೂ ಅಧಿಕ ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳನ್ನು ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಶ್ರೀನಿವಾಸ್ ಹೆಸರಿನಲ್ಲಿ 34.79 ಲಕ್ಷ ರೂ. ಮೌಲ್ಯದ ಚರಾಸ್ತಿ ಹಾಗೂ 5.41 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳಿವೆ. ಸ್ಥಿರಾಸ್ತಿಯಲ್ಲಿ 1.13 ಕೋಟಿ ರೂ. ಬೆಲೆಬಾಳುವ ಪಿತ್ರಾರ್ಜಿತ ಕೃಷಿ ಭೂಮಿ ಹಾಗೂ 4.27 ಕೋಟಿ ರೂ. ಮೌಲ್ಯದ ಸ್ವಯಾರ್ಜಿತ ಆಸ್ತಿಗಳು ಸೇರಿವೆ. 3.60 ಲಕ್ಷ ರೂ. ನಗದು ಇರುವುದಾಗಿ ಅವರು ಅಫಿಡವಿಟ್ನಲ್ಲಿ ತಿಳಿಸಿದ್ದಾರೆ.
45 ವರ್ಷದ ಶ್ರೀನಿವಾಸ್ ಕೃಷಿ ಮತ್ತು ವ್ಯವಹಾರವನ್ನು ವೃತ್ತಿಯಾಗಿಸಿಕೊಂಡಿದ್ದಾರೆ. ತುಂಬಿಗೆರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2.96 ಲಕ್ಷ ರೂ. ಸಾಲ ಬಾಕಿ ಇದೆ. ಇವರು 1999-2000ನೇ ಸಾಲಿನಲ್ಲಿ ನಗರದ ಎ.ಆರ್.ಎಂ.ವಿಜ್ಞಾನ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ್ದಾರೆ. ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ ಎಂದು ಅಫಿಡವಿಟ್ನಲ್ಲಿ ಉಲ್ಲೇಖಿಸಲಾಗಿದೆ.
