ಬೆಂಗಳೂರು: ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಹಾಗೂ ಯುವತಿಗೆ ಬೆದರಿಕೆ ಹಾಕಿರುವ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಒತ್ತಾಯಿಸಿದೆ.
ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನ ಕಾರ್ಯಕ್ರಮದಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಮಾನಹಾನಿಕರ ಹೇಳಿಕೆ ನೀಡಿರುವುದು ಮಾಧ್ಯಮಗಳಲ್ಲಿ ಬಿತ್ತರಗೊಂಡಿದೆ.
ಕಲ್ಲಡ್ಕ ಪ್ರಭಾಕರ್ ಭಟ್ ಆಡಿದ ಈ ಮಾತುಗಳನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ಮತ್ತು ತಕ್ಷಣವೇ ಸ್ವಯಂ ಪ್ರೇರಿತ ದೂರು ದಾಖಲಿಸಿ ಅವರನ್ನು ಬಂಧಿಸಬೇಕೆಂದು ಒತ್ತಾಯಿಸುತ್ತದೆ.
ಮಹಿಳೆಯರ ಬಗ್ಗೆ ಕೀಳಾಗಿ ಮತ್ತು ಅವಹೇಳನಕಾರಿಯಾಗಿ ಮಾತನಾಡುವುದು, ಅವರನ್ನು ಎರಡನೇ ದರ್ಜೆ ಪ್ರಜೆಗಳಾಗಿ ಕಾಣುವುದು ಆರೆಸ್ಸೆಸ್ ಮನಃಸ್ಥಿತಿ. ಈ ಮನಃಸ್ಥಿತಿಯ ಭಾಗವಾಗಿಯೇ ಕಲ್ಲಡ್ಕ ಪ್ರಭಾಕರ್ ಭಟ್ ಈ ರೀತಿಯ ಅವಹೇಳನಕಾರಿ ಹೇಳಿಕೆ ನೀಡಿ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ ಎಂದು ಹೇಳಿದೆ.
ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆಯು ಆರೆಸ್ಸೆಸ್ ನ ಅಂತರಂಗದ ಭಾಗವಾಗಿದೆ. ಸ್ತ್ರೀಯರು ಪೂಜ್ಯನೀಯರು ಎಂದು ಹೇಳುತ್ತಲೇ ಮುಸ್ಲಿಮರು ಎಂದಾಕ್ಷಣ ಅಪಮಾನಿಸುಬಹುದೇ? ಇದೇನಾ ಇವರ ಪವಿತ್ರ ಸಂಸ್ಕೃತಿ? ಪ್ರಭಾಕರ್ ಭಟ್ ಈ ಹೇಳಿಕೆ ಅವರ ಕೀಳು ಸಂಸ್ಕೃತಿಯ ಪ್ರತೀಕವೇ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಮಂಡ್ಯದಂತಹ ಸೌಹಾರ್ದ ನೆಲದಲ್ಲಿ ಸೌಹಾರ್ದತೆಗೆ ಬೆಂಕಿ ಹಚ್ಚುವುದನ್ನು ನಾವು ವಿರೋಧಿಸುತ್ತೇವೆ. ಕೋಮು ವಿಷಬೀಜ ಬಿತ್ತವುದು ಸಂವಿಧಾನ ವಿರೋಧಿ ನಡೆಯಾಗಿದೆ. ಇಂತಹ ಮಾನವ ವಿರೋಧಿ, ಸೌಹಾರ್ತತೆಗೆ ಧಕ್ಕೆ ತಂದು ಅಶಾಂತಿ ಉಂಟುಮಾಡುವ ಕಲ್ಲಡ್ಕ ಪ್ರಭಾಕರ್ ಭಟ್ಟನ ಮೇಲೆ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕೆಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಒತ್ತಾಯಿಸುತ್ತದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.