Home ಕರ್ನಾಟಕ ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡುತ್ತೇನೆಂದರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ: ಸಿಎಂ ಸಿದ್ದರಾಮಯ್ಯ

ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡುತ್ತೇನೆಂದರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ: ಸಿಎಂ ಸಿದ್ದರಾಮಯ್ಯ

13
0

ಮೈಸೂರು: ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡುತ್ತೇನೆಂದರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ, ವರ್ಗಗಳ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಮತಯಾಚಿಸಿ ಮಾತನಾಡಿದರು.

ನಮಗೆ ಸೈದ್ಧಾಂತಿಕ ಸ್ಪಷ್ಟತೆ ಇದ್ದಾಗ ಮಾತ್ರ ರಾಜಕೀಯ ಶಕ್ತಿ ಬರುತ್ತದೆ. ಬಿಜೆಪಿ, ಆರೆಸ್ಸೆಸ್ ಕಡೆ ತಲೆ ಹಾಕಬೇಡಿ. ಶೂದ್ರರಿಗೆ-ದಲಿತರಿಗೆ-ಮಹಿಳೆಯರಿಗೆ ಆರೆಸ್ಸೆಸ್ ಗರ್ಭಗುಡಿಯೊಳಗೆ ಪ್ರವೇಶವನ್ನೇ ಕೊಡಲ್ಲ. ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದಿದ್ದ ದೇವೇಗೌಡರು ಈಗ ಮೋದಿಗೂ ತಮಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ರಾಜಕಾರಣಿಯಾದವರಿಗೆ ಸೈದ್ಧಾಂತಿಕ ಬದ್ಧತೆ ಇರಬೇಕು ಎಂದರು.

ಬಿಜೆಪಿ ಮತ್ತು ಆರೆಸ್ಸೆಸ್ ಸಾಮಾಜಿಕ ನ್ಯಾಯದ ವಿರೋಧಿ. ಹೀಗಾಗಿ ಮೀಸಲಾತಿಯನ್ನು ಇಷ್ಟ ಪಡುವುದಿಲ್ಲ. ಮೀಸಲಾತಿ ಎನ್ನುವುದು ಭಿಕ್ಷೆಯಲ್ಲ. ಅದು ಶೋಷಿತ ಜನ ಸಮುದಾಯಗಳ ಹಕ್ಕು. ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇದ್ದೇ ಇರಬೇಕು ಎಂದರು.

ಸ್ವಾತಂತ್ರ್ಯ ಪೂರ್ವದಲ್ಲಿ, ಬ್ರಿಟೀಷರಿಗೂ ಮೊದಲು ಓದುವ ಹಕ್ಕು ಶೂದ್ರರಿಗೆ ಇತ್ತಾ? ಮಹಿಳೆಯರಿಗೆ ಇತ್ತಾ? ಪತಿ ಮೃತಪಟ್ಟ ತಕ್ಷಣ ಪತ್ನಿ ಕೂಡ ಬೆಂಕಿಗೆ ಆಹುತಿಯಾಗಬೇಕಿತ್ತು. ಇಂಥಾ ಮನುಸ್ಮೃತಿ ಪ್ರೇರಿತ ಅಮಾನವೀಯ ಪದ್ಧತಿ ರದ್ದಾಗಿದ್ದು ನಮ್ಮ ಸಂವಿಧಾನದಿಂದ. ಹೀಗಾಗಿ ಈ ಸಂವಿಧಾನ ಬದಲಾಯಿಸಿ ಮತ್ತೆ ಮನುಸ್ಮೃತಿ ತರಬೇಕು ಎನ್ನುವುದು ಅವರ ಹುನ್ನಾರ. ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ ಎಂದು ಕರೆ ನೀಡಿದರು.

ಇಂಥಾ ಆರೆಸ್ಸೆಸ್ ಜತೆ ಜೆಡಿಎಸ್ ಸೇರಿಕೊಂಡಿದೆಯಲ್ಲಾ, ಇದನ್ನು ಟೀಕಿಸಬಾರದಾ? ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನಲ್ಲಿ ಹಣ ಮೀಸಲಿಡುವ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್. ಅಭಿವೃದ್ಧಿ ಹಣದಲ್ಲಿ ಶೇ24.1 ಹಣ ಮೀಸಲಿಡಬೇಕು ಎನ್ನುವ ಕಾನೂನನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರ. ಈ ಪ್ರಗತಿಪರ ಕಾನೂನನ್ನು ಇಡೀ ದೇಶದಲ್ಲಿ ಬಿಜೆಪಿಯ ಯಾವ ಸರ್ಕಾರವೂ ಜಾರಿ ಮಾಡಿಲ್ಲ. ಮಾಡಿರುವುದು ನಮ್ಮ ಕಾಂಗ್ರೆಸ್ ಸರ್ಕಾರ ಮಾತ್ರ. ಇದನ್ನೆಲ್ಲಾ ಜನ ಸಮುದಾಯ ತಿಳಿದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಸತೀಶ್ ಜಾರಕಿಹೊಳಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಮತ್ತು ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ಸೇರಿ ಹಲವು ನಾಯಕರು, ಕೆಪಿಸಿಸಿಯ ಎಸ್.ಸಿ/ಎಸ್.ಟಿ ವಿಭಾಗದ ಮುಖಂಡರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here