ಚುನಾವಣಾ ಹೊಸ್ತಿಲಿನಲ್ಲಿರುವ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸೋಮವಾರ ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡುತ್ತಿದ್ದು, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು: ಚುನಾವಣಾ ಹೊಸ್ತಿಲಿನಲ್ಲಿರುವ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸೋಮವಾರ ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡುತ್ತಿದ್ದು, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ರಾಷ್ಟ್ರಕವಿ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪು ಅವರ ಹೆಸರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ ಸೇರಿದಂತೆ ಹಲವು ಯೋಜನಗಳಿಗೆ ಮೋದಿಯವರು ನಾಳೆ ಚಾಲನೆ ನೀಡಲಿದ್ದಾರೆ.
ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮೋದಿಯವರು ಮಾತನಾಡಲಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸಲು ಈಗಾಗಲೇ ವಿದಾಯ ಹೇಳಿರುವ ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ಪ್ರಬಲ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಮೋದಿಯವರೊಂದಿಗೆ ವೇದಿಕೆ ಹಂಚಿಕೊಳ್ಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಶಿವಮೊಗ್ಗದ ವಿಮಾನ ನಿಲ್ದಾಣವನ್ನು 450 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ವಿಮಾನ ನಿಲ್ದಾಣದ ಪ್ಯಾಸೆಂಜರ್ ಟರ್ಮಿನಲ್ ಕಟ್ಟಡವು ಗಂಟೆಗೆ 300 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ರೂ. 7,165 ಕೋಟಿ ಮೌಲ್ಯದ ಯೋಜನೆಗಳನ್ನೂ ಮೋದಿ ಅವರು ಉದ್ಘಾಟಿಸಲಿದ್ದಾರೆ,
ಇದಷ್ಟೇ ಅಲ್ಲದೆ, 110 ಕಿ.ಮೀ ಉದ್ದದ ಎಂಟು ಸ್ಮಾರ್ಟ್ ರಸ್ತೆಗಳು, ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್, ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್, ಸ್ಮಾರ್ಟ್ ಬಸ್ ಶೆಲ್ಟರ್ ಯೋಜನೆಗಳು, ಘನತ್ಯಾಜ್ಯ ನಿರ್ವಹಣಾ ವ್ಯವಸ್ಥೆ, ಅಭಿವೃದ್ಧಿ ಸೇರಿದಂತೆ 895 ಕೋಟಿ ರೂಪಾಯಿ ಮೌಲ್ಯದ 44 ಸ್ಮಾರ್ಟ್ ಸಿಟಿ ಯೋಜನೆಗಳನ್ನು ಮೋದಿ ಉದ್ಘಾಟಿಸಲಿದ್ದಾರೆ.
ಅಭಿವೃದ್ಧಿಗೊಂಡಿರುವ ವಸ್ತುಸಂಗ್ರಹಾಲಯಗಳು, 90 ಕನ್ಸರ್ವೆನ್ಸಿ ಲೇನ್‌ಗಳು, ಉದ್ಯಾನವನಗಳು ಮತ್ತು ನದಿ ಮುಂಭಾಗದ ಅಭಿವೃದ್ಧಿ ಯೋಜನೆಗಳು. 990 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 2 ರೈಲ್ವೆ ಯೋಜನೆಗಳು, ಮೋದಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿ 950 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹುಗ್ರಾಮ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ನಂತರ ಬೆಳಗಾವಿಗೆ ತೆರಳಲಿರುವ ಮೋದಿಯವರು, ಅಲ್ಲಿ ಭರ್ಜರಿ ರೋಡ್ ಶೋ ನಡೆಸಿ ಸಮಾವೇಶ ಸ್ಥಳಕ್ಕೆ ತೆರಳಲಿದ್ದಾರೆ.
ಮಧ್ಯಾಹ್ನ 3.15ರಿಂದ 4.30ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮೋದಿ, ಪಿಎಂ ಕಿಸಾನ್ 13ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ.
ಬಳಿಕ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಸಂಜೆ 4.40ಕ್ಕೆ ಕಾರ್ಯಕ್ರಮದ ಸ್ಥಳದಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಸಂಜೆ 5.10ಕ್ಕೆ ಅಲ್ಲಿಂದ ವಿಶೇಷ ವಿಮಾನ ಮೂಲಕ ದೆಹಲಿಗೆ ಪ್ರಯಾಣ ಕೈಗೊಳ್ಳಲಿದ್ದಾರೆ.