ಮಂಗಳೂರು : ದುರ್ಬಲ ಬುಡಕಟ್ಟು ಸಮುದಾಯದವರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಿಸಲು ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಅಭಿಯಾನ (ಪಿಎಂ ಜನಮನ್) ಯೋಜನೆಯಡಿ ಅಭಿವೃದ್ಧಿ ಮಿಷನ್ ಪ್ರಾರಂಭಿಸಲಾಗಿದ್ದು, ಅದರ ಯಶಸ್ವಿಗೆ ಅಧಿಕಾರಿಗಳು ಮುಂದಾಗಬೇಕು ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ.
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲಾ ಇಲಾಖೆಗಳು ಪರಿಶಿಷ್ಟ ಪಂಗಡದ ಕೊರಗ ಸಮುದಾಯಕ್ಕೆ ಸಂಬಂಧಿಸಿದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಹುಡುಕಿ ಅರ್ಹರಿಗೆ ತಲುಪಿಸಬೇಕು. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ಫಲಾನುಭವಿ ಆಧಾರಿತ ಯೋಜನೆಗಳನ್ನು ಕೊರಗ ಸಮುದಾಯದವರಿಗೆ ಆದ್ಯತೆಯಲ್ಲಿ ನೀಡಬೇಕು. ತಾಲೂಕು ಮಟ್ಟದ ಅಧಿಕಾರಿಗಳು ತಹಶೀಲ್ದಾರ್‌ಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಐಟಿಡಿಪಿ ಅಧಿಕಾರಿ ಶಿವಕುಮಾರ್ ಮಾತನಾಡಿ ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದ ಅಧಿಕಾರಿಯೊಬ್ಬರು ಜಿಲ್ಲೆಗೆ ಆಗ ಮಿಸಿ ಬುಡಕಟ್ಟು ಸಮುದಾಯದ ಯೋಜನೆಯ ಅನುಷ್ಠಾನದ ಪರಿಶೀಲನೆ ನಡೆಸಲಿದ್ದಾರೆ. ಫಲಾನುಭವಿ ಆಧಾರಿತ ಸೌಲಭ್ಯಗಳನ್ನು ಸಮಗ್ರವಾಗಿ ಜಾರಿಗೊಳಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್ ಜಿ., ಜಿಲ್ಲಾ ಆರೋಗ್ಯಧಿಕಾರಿ ಡಾ.ತಿಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಮತ್ತಿತರರು ಉಪಸ್ಥಿತರಿದ್ದರು.