ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆಹೋಗಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಬಿ ಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿರುವ ಬಗ್ಗೆ ವರದಿಯಾಗಿದೆ.
ತಾವು ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಪಿರ್ಯಾದಿದಾರ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿದೆ. ಎಫ್ಐಆರ್ ದಾಖಲಾದ ನಂತರ ಏ.12 ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೇನೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದರು. ದೂರಿನಲ್ಲಿ ಅಪರಾಧದ ಅಂಶಗಳಿಲ್ಲದಿರುವುದರಿಂದ ರದ್ದು ಪಡಿಸಲು ಅರ್ಜಿಯಲ್ಲಿ ಮನವಿ ಮಾಡಲಾಗಿದೆ ಎಂದು ಬಿಎಸ್ ವೈ ತಿಳಿಸಿದ್ದಾರೆ.
ಸಹಾಯ ಕೇಳಲು ತಮ್ಮ ಪುತ್ರಿಯೊಂದಿಗೆ ಬಿಎಸ್ ವೈ ಭೇಟಿ ಮಾಡಿದಾಗ ಅನುಚಿತ ವರ್ತನೆ ಎಂದು ಮಹಿಳೆಯೊಬ್ಬರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಪೊಕ್ಸೊ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.