ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ Confident Group ಸಂಸ್ಥೆಯ ಚೇರ್ಮನ್ ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಹಲವು ಆಯಾಮಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಪದೇಪದೇ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳ ದಾಳಿಯಿಂದ ಮಾನಸಿಕ ಒತ್ತಡ ಎದುರಾಗಿದ್ದ ಕಾರಣ ಈ ನಿರ್ಧಾರ ಕೈಗೊಂಡಿರಬಹುದೆಂಬ ಮಾತುಗಳು ಕೇಳಿಬರುತ್ತಿವೆ. ಇಂದು ಕೂಡ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದ ಸಂದರ್ಭದಲ್ಲೇ ಈ ದುರ್ಘಟನೆ ನಡೆದಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಆದರೆ ಈ ಬಗ್ಗೆ ಅಧಿಕೃತ ದೃಢೀಕರಣ ಇನ್ನಷ್ಟೇ ಬಾಕಿಯಿದೆ.
ಘಟನೆಯ ಮಾಹಿತಿ ಪಡೆದ ತಕ್ಷಣ ಅಶೋಕ್ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಅಂಶಗಳ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆಗೆ ಕಾರಣಗಳು, ಸಂದರ್ಭಗಳು ಹಾಗೂ ಇತರೆ ವಿವರಗಳು ತನಿಖೆಯ ನಂತರವೇ ಸ್ಪಷ್ಟವಾಗಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.
