Home Uncategorized ಬಡತನ, ಹಸಿವು ಅಸಮಾನತೆ ಇರುವವರೆಗೂ ಗ್ಯಾರಂಟಿ ಯೋಜನೆಗಳು ಇರುತ್ತವೆ: ಸಿಎಂ ಸಿದ್ದರಾಮಯ್ಯ

ಬಡತನ, ಹಸಿವು ಅಸಮಾನತೆ ಇರುವವರೆಗೂ ಗ್ಯಾರಂಟಿ ಯೋಜನೆಗಳು ಇರುತ್ತವೆ: ಸಿಎಂ ಸಿದ್ದರಾಮಯ್ಯ

26
0

ಚಿಕ್ಕಮಗಳೂರು: ಸಮಾಜದಲ್ಲಿ ಬಡತನ, ಹಸಿವು, ಅಸಮಾನತೆ ಇರುವವರೆಗೂ ಗ್ಯಾರಂಟಿ ಯೋಜನೆಗಳೂ ಇರುತ್ತವೆ. ಗ್ಯಾರಂಟಿ ಯೋಜನೆಗಳು ರಾಜ್ಯದ ನಾಲ್ಕೂವರೆ ಕೋಟಿ ಜನರಿಗೆ ತಲುಪುತ್ತಿವೆ. ಬಿಜೆಪಿ ಸರಕಾರಗಳ ಆರ್ಥಿಕ ನೀತಿಗಳಿಂದ ಆರ್ಥಿಕವಾಗಿ ತೊಂದರೆಗೆ ಸಿಲುಕಿದ್ದ ಜನರಿಗೆ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಆರ್ಥಿಕ ಶಕ್ತಿ ನೀಡುತ್ತಿವೆ. ಇಂತಹ ಜನಪರ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ, 5 ವರ್ಷಗಳ ಕಾಲ ಈ ಯೋಜನೆ ಮುಂದುವರಿಯಲಿದೆ. 5 ವರ್ಷಗಳ ನಂತರ ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗಲೂ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರವಿವಾರ ನಗರದ ಜಿಲ್ಲಾ ಆಟದ ಮೈದಾನದಲ್ಲಿ ರಾಜ್ಯ ಸರಕಾರದ 5 ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಬಿಜೆಪಿ ಪಕ್ಷದ ಮುಖಂಡರು ನಿರಂತರವಾಗಿ ಅವಮಾನ ಮಾಡುತ್ತಿದೆ. ಒಂದು ಕಡೆ ಅವಮಾನಿಸುತ್ತಲೇ ಮತ್ತೊಂದು ಕಡೆ ವಿಪರೀತ ಸುಳ್ಳುಗಳನ್ನು ಹೇಳುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಯಾವುದೇ ಲಾಭವಾಗುತ್ತಿಲ್ಲ, ಗ್ಯಾರಂಟಿ ಯೋಜನೆಗಳು ಜನರಿಗೆ ಸಿಗುತ್ತಿಲ್ಲ. 5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುವುದಿಲ್ಲ, ಸರಕಾರದ ಖಜಾನೆ ಖಾಲಿಯಾಗಿದೆ ಎಂದು ಬಿಜೆಪಿಯವರು ಸದಾ ಸುಳ್ಳು ಹೇಳುತ್ತಿದ್ದಾರೆ. ಜನರು ಬಿಜೆಪಿಯವರ ಸುಳ್ಳುಗಳನ್ನು ನಂಬಬಾರದು. ಈ ಯೋಜನೆಗಳು ರಾಜ್ಯದ ನಾಲ್ಕೂವರೆ ಕೋಟಿ ಜನರಿಗೆ ತಲುಪಿದೆ. ಜನರ ಆರ್ಥಿಕ ಶಕ್ತಿ ಹೆಚ್ಚಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ಸರಕಾರದ ಖಜಾನೆ ಖಾಲಿಯಾಗಿಲ್ಲ. ಇದಕ್ಕೆ ಸರಕಾರದ ದಾಖಲೆಗಳಲ್ಲಿ ಸಾಕ್ಷಿ ಇದೆ. ಬಿಜೆಪಿಯವರು ಸುಳ್ಳು ಹೇಳುವುದನ್ನು ಬಿಟ್ಟು ಅಂಕಿ ಅಂಶ ನೋಡಿ ಮಾತನಾಡಬೇಕು. ಈ ಬಗ್ಗೆ ಬಿಜೆಪಿ, ಜೆಡಿಎಸ್ ಮೈತ್ರಿಕೂಟದವರಿಗೆ ತಾಕತ್ತಿದ್ದರೆ ಚರ್ಚೆಗೆ ವೇದಿಕೆ ಕಲ್ಪಿಸಲಿ ಎಂದು ಸವಾಲು ಹಾಕಿದರು.

ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಬಿಜೆಪಿ, ಜೆಡಿಎಸ್ ಮೈತ್ರಿಕೂಟದವರಿಗೆ ಸಹಿಸಲು ಆಗುತ್ತಿಲ್ಲ. ಇದಕ್ಕಾಗಿ ಈ ಯೋಜನೆಗಳ ಬಗ್ಗೆ ಸುಳ್ಳು ಹೇಳುತ್ತಾ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದ ಅವರು, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇದ್ದಾರೆ. ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಹಕ್ಕು. ಫಲಾನುಭವಿಗಳನ್ನು ಅವಮಾನಿಸುವುದನ್ನು ನಿಲ್ಲಿಸಿ ಎಂದು ಎಚ್ಚರಿಸಿದರು.

ಬಿಜೆಪಿ ಜನರ ಬದುಕಿನ ಪ್ರಶ್ನೆಗಳನ್ನು ಪಕ್ಕಕ್ಕಿಟ್ಟು ಕೇವಲ ಭಾವನೆಗಳನ್ನು ಕೆರಳಿಸುತ್ತದೆ. ಇದುವರೆಗೂ ರಾಜ್ಯದಲ್ಲಿ ಬಿಜೆಪಿ ಒಂದು ಬಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದಿದೆಯೇ ಹೊರತು ಸ್ವಂತ ಶಕ್ತಿ ಮೇಲೆ ಅಧಿಕಾರ ನಡೆಸಿಯೇ ಇಲ್ಲ. ಕಾಂಗ್ರೆಸ್ ಪಕ್ಷ 2013 , 2023 ಎರಡೂ ಬಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ದೇವೆ. ಅಧಿಕಾರಕ್ಕಾಗಿ ವಾಮಮಾರ್ಗ ಹಿಡಿಯುವ ಪಕ್ಷ ಬಿಜೆಪಿ ಎಂದು ಟೀಕಿಸಿದ ಅವರು, ಹಿಂದಿನ ಬಿಜೆಪಿ ಸರಕಾರ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿತ್ತು. ಅಧಿಕಾರ ಬಂದ ಮೇಲೆ ಜನಪರ ಆಡಳಿತ ನೀಡದೇ ಭ್ರಷ್ಟಾಚಾರ, ಕಮಿಷನ್ ದಂಧೆ ನಡೆಸಿದ್ದರಿಂದ ಈ ಬಾರಿ ಜನರು ಅವರಿಂದ ಅಧಿಕಾರ ಕಿತ್ತುಕೊಂಡು ಪಾಠ ಕಲಿಸಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, 70 ವರ್ಷಗಳ ಅಧಿಕಾರವಧಿಯಲ್ಲಿ ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ಜನಪರ ಯೋಜನೆಗಳ ಮೂಲಕ ದೇಶ ಕಟ್ಟುವ ಕೆಲಸ ಮಾಡಿದೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜನರ ಬದುಕು ಕಟ್ಟುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವ ತನಕ ಗ್ಯಾರಂಟಿ ಯೋಜನೆಗಳನ್ನು ತೆಗೆದುಹಾಕಲು ಸಾಧ್ಯವಿಲ್ಲ. ಮುಂದಿನ 10 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳು ಇರಲಿವೆ. ಕಾಂಗ್ರೆಸ್ ಬಡತನದ ವಿರುದ್ಧ ಯುದ್ಧ ಮಾಡುತ್ತದೆಯೇ ಹೊರತು ಬಡವರ ವಿರುದ್ಧ ಯುದ್ದ ಮಾಡುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಗಳಿಗೆ ವರ್ಷಕ್ಕೆ 50-60 ಸಾವಿರ ಉಳಿತಾಯವಾಗುತ್ತಿದೆ ಎಂದರು.

ಬಿಜೆಪಿ, ಜೆಡಿಎಸ್ ಮೈತ್ರಿಯಾಗಿದ್ದರೂ ವಿಧಾನಪರಿಷತ್ ಚುನಾವಣೆಯಲ್ಲಿ ಸೋತರು. ರಾಜ್ಯಸಭೆ ಚುನಾವಣೆ ವೇಳೆ ಕಾಂಗ್ರೆಸ್ ಶಾಸಕರಿಗೆ ಫೋನ್ ಕರೆ ಮೇಲೆ ಕರೆ ಮಾಡಲಾಗಿತ್ತು. ಆದರೆ ವಿಜಯೇಂದ್ರ ನಾವು ಯಾರಿಗೂ ಕರೆ ಮಾಡಿಲ್ಲ ಎನ್ನುತ್ತಿದ್ದಾರೆ. ಆದರೆ ಶಾಮನೂರು ಶಿವಶಂಕರಪ್ಪ ಅವರಿಗೆ ಕುಮಾರಸ್ವಾಮಿ, ಯಡಿಯೂರಪ್ಪ ಇಬ್ಬರೂ ಸೇರಿ ಕರೆ ಮಾಡಿದ್ದರಂತೆ. ಶಿವಶಂಕರಪ್ಪ ಅವರು ಇಬ್ಬರಿಗೂ ಹಣ ಏನಾದರೂ ಬೇಕೇ ಎಂದು ಕೇಳಿದ್ದಾರೆ. ಇಲ್ಲ ಮತ ಬೇಕು ಎಂದು ಅವರಿಬ್ಬರು ಕೇಳಿದ್ದಾರೆ. ಈ ಬಗ್ಗೆ ನನ್ನ ಬಳಿ ದೊಡ್ಡ ಪಟ್ಟಿಯೇ ಇದ್ದು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವೆ ಮೋಟಮ್ಮ, ಜಿಲ್ಲೆಯ ಶಾಸಕರಾದ ನಯನಾ ಮೋಟಮ್ಮ, ಕೆ.ಎಸ್.ಆನಂದ್, ಟಿ.ಡಿ.ರಾಜೇಗೌಡ, ಜಿ.ಎಚ್.ಶ್ರೀನಿವಾಸ್, ಎಚ್.ಡಿ.ತಮಯ್ಯ, ಎಚ್.ಎಲ್.ಹನುಮಂತಯ್ಯ, ಶಾಸಕ ಕೋನರೆಡ್ಡಿ, ಆರತಿ ಕೃಷ್ಣ, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀನಿವಾಸ್, ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯ, ಡಿಸಿ ಮೀನಾ ನಾಗರಾಜ್, ಎಸ್ಪಿ ಡಾ.ವಿಕ್ರಮ್ ಅಮಟೆ, ಜಿಪಂ ಸಿಇಒ ಡಾ.ಗೋಪಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

ಸಮಾವೇಶದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ವಿವಿಧ ಸೌಲಭ್ಯಗಳನ್ನು ವಿತರಣೆ ಮಾಡಿದರು. ಸಮಾವೇಶದಲ್ಲಿ 25 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

 

 

 

LEAVE A REPLY

Please enter your comment!
Please enter your name here