ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ ಮನೆಯೊಡತಿಗೆ ಮಾಸಿಕ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮೀ’ ಯೋಜನೆಗೆ ಬುಧವಾರ ಚಾಲನೆ ನೀಡಲಾಗುತ್ತಿದೆ. ಅದರೊಂದಿಗೆ ನಾಲ್ಕನೇ ಗ್ಯಾರಂಟಿ ಅನುಷ್ಠಾನವಾದಂತಾಗಲಿದೆ. ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ ಮನೆಯೊಡತಿಗೆ ಮಾಸಿಕ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮೀ’ ಯೋಜನೆಗೆ ಬುಧವಾರ ಚಾಲನೆ ನೀಡಲಾಗುತ್ತಿದೆ. ಅದರೊಂದಿಗೆ ನಾಲ್ಕನೇ ಗ್ಯಾರಂಟಿ ಅನುಷ್ಠಾನವಾದಂತಾಗಲಿದೆ.
ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಚುನಾವಣೆಯಲ್ಲಿ ನೀಡಿತ್ತು. ಅದರಲ್ಲಿ ಶಕ್ತಿ ಯೋಜನೆ ಜಾರಿಯಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿ ಅಕ್ಕಿಯ ಬದಲು ಹಣ ಖಾತೆಗಳಿಗೆ ಜಮಾ ಆಗುತ್ತಿದೆ. ಗೃಹಜ್ಯೋತಿಯ ನೋಂದಣಿ ಒಂದು ಕೋಟಿ ದಾಟಿದೆ. ಇಂದು ಗೃಹಲಕ್ಷ್ಮಿ ಜಾರಿಗೆ ಬರುತ್ತಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸಂಜೆ 5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯೋಜನೆಯ ಲಾಂಛನ ಹಾಗೂ ಪೋಸ್ಟರ್ ಬಿಡುಗಡೆ ಮಾಡಲಿದ್ದಾರೆ.
ಶಾಸಕ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಉಪಸ್ಥಿತರಿರುವರು.
ಯೋಜನೆಯಡಿ ಆ.15ಕ್ಕೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯ ಆಗಲಿದೆ. ರೇಷನ್ ಕಾರ್ಡ್ನಲ್ಲಿ ಮನೆಯ ಯಜಮಾನಿಯಾಗಿರುವವರು ಯೋಜನೆಯ ಫಲಾನುಭವಿಯಾಗಲಿದ್ದಾರೆ. ಅವರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಅವರ ಪತಿಯ ಆಧಾರ್ ಕಾರ್ಡ್ ನೀಡಬೇಕು. ಜಿಎಸ್ಟಿ ಹಾಗೂ ಆದಾಯ ತೆರಿಗೆ ಪಾವತಿದಾರರ ಪತ್ನಿಯರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಗ್ರಾಪಂಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಅವಕಾಶ ಇದೆ. ಸರ್ಕಾರ ನೇಮಕ ಮಾಡಿರುವ ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ಬಂದು ನೋಂದಣಿ ಮಾಡಲಿದ್ದಾರೆ.
ಯೋಜನೆ ಜಾರಿಗೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಜಿಲ್ಲಾಧಿಕಾರಿಗಳ ಜೊತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಸಂವಾದ ನಡೆಸಿದ್ದು, ಕೆಲ ಸೂಚನೆಗಳನ್ನು ನೀಡಿದ್ದಾರೆ.
ನೋಂದಾವಣಿ ಹೇಗೆ?
ರೇಷನ್ ಕಾರ್ಡ್ನಲ್ಲಿ ಗುರುತಿಸಿರುವ ಮಹಿಳೆ ಮೊಬೈಲ್ ಸಂಖ್ಯೆಗೆನೋಂದಣಿ ದಿನಾಂಕ, ಸಮಯ, ಸ್ಥಳದ ವಿವರ ಎಸ್ಎಂಎಸ್ ಮೂಲಕ ಕಳುಹಿಸಲಾಗುತ್ತದೆ.
ನೋಂದಣಿ ಮಾಡಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ತೆರಳಿ ನೋಂದಣಿ ಮಾಡಲಿದ್ದಾರೆ.
ಸಮಸ್ಯೆಗಳಿದ್ದಲ್ಲಿ 1902ಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್ಎಂಎಸ್ ಮಾಡಿ ಮಾಹಿತಿ ಪಡೆಯಬಹುದು.
ನಿಗದಿತ ಸಮಯಕ್ಕೆ ಹೋಗಲು ಸಾಧ್ಯವಾಗದಿದ್ದರೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 -7 ಗಂಟೆಯೊಳಗೆ ಭೇಟಿ ನೀಡಿ.
ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಬಿಟ್ಟು ಬೇರೆ ಬ್ಯಾಂಕ್ಗೆ ನೋಂದಣಿ ಮಾಡಿಸಬಹುದು.
ನೋಂದಣಿ ಆದಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ.
ಪ್ರಜಾಪ್ರತಿನಿಧಿಗಳಲ್ಲಿ ನೋಂದಣಿ ಯಾದರೆ ಮಂಜೂರಾತಿ ಪತ್ರ ತಡವಾಗಿ ತಲುಪಲಿದೆ.