ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್ಡಿಎ) ಜೆಡಿಎಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಅವರು, ಭಾನುವಾರ ಭೇಟಿಯಾಗಿ ಆಶೀರ್ವಾದ ಪಡೆದರು. ಬೆಂಗಳೂರು: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್ಡಿಎ) ಜೆಡಿಎಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಅವರು, ಭಾನುವಾರ ಭೇಟಿಯಾಗಿ ಆಶೀರ್ವಾದ ಪಡೆದರು.
ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಖಾಸಗಿ ನಿವಾಸ ಧವಳಗಿರಿಗೆ ಇಂದು ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು. ಈ ವೇಳೆ ನಿಖಿಲ್ ಅವರ ಮುಂದಿನ ರಾಜಕೀಯ ಜೀವನಕ್ಕೆ ಯಡಿಯೂರಪ್ಪ ಅವರು ಶುಭ ಕೋರಿದರು. ಎನ್ಡಿಗೆ ಜೆಡಿಎಸ್ ಸೇರ್ಪಡೆ ಹಿನ್ನೆಲೆಯಲ್ಲಿ ಪರಸ್ಪರರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ನಾಯಕ ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಪುತ್ರ ಸಿರೀಶ್ ಹಾಗೂ ಮಾಜಿ ಸಚಿವ ಮುನಿರತ್ನ ಸೇರಿ ಹಲವರು ಉಪಸ್ಥಿತರಿದ್ದರು.
ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ನಿಖಿಲ್ ಅವರು, ಎನ್’ಡಿಎ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಎಲ್ಲರಿಗೂ ತಿಳಿದಿದೆ. ಅದರ ಆಧಾರದ ಮೇಲೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೇನೆ. ಯಡಿಯೂರಪ್ಪ ಕರ್ನಾಟಕದ ಹಿರಿಯ ನಾಯಕರು. ಹೀಗಾಗಿ ವೈಯಕ್ತಿಕವಾಗಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದುಕೊಂಡೆ ಎಂದು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಬಗ್ಗೆ ಚಿಂತನೆ ಮಾಡಿಲ್ಲ, ನಾನು ಮಂಡ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಅಲ್ಲ, ಸದ್ಯ ಬಿಜೆಪಿ, ಜೆಡಿಎಸ್ ನಡುವೆ ಟಿಕೆಟ್ ಬಗ್ಗೆ ಚರ್ಚೆ ಆಗಿಲ್ಲ, ನಮಗೆ 28 ಕ್ಷೇತ್ರಗಳ ಮೇಲೂ ಗಮನ ಇದೆ. ಹಾಗಾಗಿ ಎನ್ಡಿಎ ಕೂಟಕ್ಕೆ ಈ ಬಾರಿ 28 ಕ್ಷೇತ್ರಕ್ಕೆ 28 ಕ್ಷೇತ್ರದಲ್ಲೂ ಗೆಲುವು ನಿಶ್ಚಿತ ಎಂದು ತಿಳಿಸಿದರು.
ಇದೇ ವೇಳೆ ಕಾವೇರಿ ವಿಚಾರವಾಗ ಮಾತನಾಡಿದ ಅವರು, ರಾಜ್ಯದ ಜನತೆಗೆ, ನಮ್ಮ ರೈತರಿಗೆ ಕಳೆದ 200 ವರ್ಷಗಳಿಂದಲೂ ಆಗುತ್ತಿರುವ ಅನ್ಯಾಯ ಇದು. ತಾರತಮ್ಯದ ನಿರ್ಧಾರಗಳಾಗುತ್ತಿವೆ. ಸುಪ್ರೀಂ ಕೋರ್ಟ್ 5 ಸಾವಿರ ಕ್ಯೂಸೆಕ್ ನೀರನ್ನು 15 ದಿನಗಳ ಕಾಲ ಬಿಡುವುದಕ್ಕೆ ಆದೇಶ ನೀಡಿದೆ. ಆದರೆ ಇದನ್ನು ಪಾಲಿಸಿದಲ್ಲಿ 7.5 ಟಿಎಂಸಿ ನೀರು 15 ದಿನಗಳಲ್ಲಿ ಖಾಲಿ ಆಗುತ್ತದೆ, ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ದೆಹಲಿಗೆ ಹೋದ ಸಂದರ್ಭದಲ್ಲಿ ಅಮಿಶ್ ಶಾ, ನಡ್ಡಾ ಜೊತೆ ಚರ್ಚೆ ಮಾಡಿದ್ದೇವೆ. ಪ್ರಧಾನಿ ಮೋದಿ ಗಮನ ಸೆಳೆಯುತ್ತೇವೆ. ಮಾಜಿ ಪಿಎಂ ದೇವೇಗೌಡರು ಸಹ ಪ್ರಧಾನಿ ಭೇಟಿ ಮಾಡಲಿದ್ದಾರೆ. ನಾನು ಕೂಡ ಈ ಹೋರಾಟದಲ್ಲಿ ಭಾಗಿಯಾಗುತ್ತೇನೆ ಎಂದರು.