ಬೆಂಗಳೂರು : ಭಾರತದ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್(52) ಎಂಬುವರು ಇಲ್ಲಿನ ಕೊತ್ತನೂರು ಠಾಣಾ ವ್ಯಾಪ್ತಿಯ ಅಪಾರ್ಟ್‍ಮೆಂಟ್‍ನ ನಾಲ್ಕನೇ ಮಹಡಿಯಿಂದ ಜಿಗಿದು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ನಗರದ ಕೊತ್ತನೂರು ಠಾಣಾ ವ್ಯಾಪ್ತಿಯ ಎಸ್.ಎಲ್.ವಿ ಪ್ಯಾರಡೈಸ್ ಅಪಾರ್ಟ್‍ಮೆಂಟ್‍ನಲ್ಲಿ ಗುರುವಾರ ಘಟನೆ ನಡೆದಿದ್ದು, ಅಪಾರ್ಟ್‍ಮೆಂಟ್‍ನ ನಾಲ್ಕನೇ ಮಹಡಿಯ ಬಾಲ್ಕನಿಯಿಂದ ಅವರು ಬಿದ್ದಿದ್ದರು. ತಕ್ಷಣವೇ ಜಾನ್ಸನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಕೊತ್ತನೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಘಟನೆ ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಹಾಸನ ಜಿಲ್ಲೆಯ ಅರಸಿಕೆರೆ ಮೂಲದವರಾದ ಡೇವಿಡ್ ಜಾನ್ಸನ್ ಬಲಗೈ ಮಧ್ಯಮ ವೇಗಿಯಾಗಿದ್ದರು. ಕರ್ನಾಟಕ ರಾಜ್ಯ ತಂಡದ ಪರ ದೇಶಿ ಕ್ರಿಕೆಟ್ ಆಡಿದ್ದ ಡೇವಿಡ್ 1996ರಲ್ಲಿ ಭಾರತದ ತಂಡಕ್ಕೆ ಪಾದಾರ್ಪಣೆ ಮಾಡಿದ್ದರು. ಆದರೆ, ಕೇವಲ 2 ಟೆಸ್ಟ್ ಪಂದ್ಯಗಳಲ್ಲಷ್ಟೇ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪಯಣ ಅಂತ್ಯವಾಗಿತ್ತು. ನಂತರ ರಾಜ್ಯ ತಂಡದ ಪರ ಕ್ರಿಕೆಟ್ ಪಯಣ ಮುಂದುವರೆಸಿದ್ದರು.
ಡೇವಿಡ್ ಜಾನ್ಸನ್ ಸಾವಿನ ಮಾಹಿತಿ ತಿಳಿದು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ಗೌತಮ್ ಗಂಭೀರ್ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.