ಬೆಂಗಳೂರು, ಎ.4: ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ತೇಜಸ್ವಿ ಸೂರ್ಯ ಇಂದು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಜಯನಗರ 4ನೇ ಬ್ಲಾಕಿನ ಮಯ್ಯಾಸ್ ಹೋಟೆಲ್ನಿಂದ ರೋಡ್ ಶೋ ಮೂಲಕ ಹೊರಟು ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಪ್ರತಾಪ ಸಿಂಹ, ರಾಜ್ಯಸಭಾ ಸದಸ್ಯ ಜಗ್ಗೇಶ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಶಾಸಕರಾದ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ, ಉದಯ ಗರುಡಾಚಾರ್, ವಿಧಾನಪರಿಷತ್ ಸದಸ್ಯ ಶರವಣ, ಜೆಡಿಎಸ್ ಬೆಂಗಳೂರು ಮಹಾನಗರ ಅಧ್ಯಕ್ಷ ರಮೇಶ್ ಗೌಡ, ಜೆಡಿಎಸ್ ಬೆಂಗಳೂರು ದಕ್ಷಿಣ ಜಿಲ್ಲೆ ಅಧ್ಯಕ್ಷ ತುಳಸಿರಾಮ್ ಉಪಸ್ಥಿತರಿದ್ದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮಾಜಿ ಮಹಾಪೌರರು, ಉಪ ಮಹಾಪೌರರು, ಬಿಬಿಎಂಪಿ ನಿಕಟಪೂರ್ವ ಸದಸ್ಯರು, ಪಕ್ಷದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಕೋಷ್ಠಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಂಡಲದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ಗಿರಿನಗರದ ಶ್ರೀ ಗಣೇಶ ದೇವಸ್ಥಾನದಲ್ಲಿ ಕುಟುಂಬದೊಂದಿಗೆ ಪೂಜೆ ಸಲ್ಲಿಸಿದರು. ಗಿರಿನಗರದ ಭಾಗದಿಂದ ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡಿ ಶುಭ ಹಾರೈಸಿದರು.