Home ಕರ್ನಾಟಕ ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ‘ಸೈಕಲ್ ಜಾಥಾ’

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ‘ಸೈಕಲ್ ಜಾಥಾ’

21
0

ಬೆಂಗಳೂರು, ಜೂ.20: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಹೊರಟಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ನಡೆದಿದೆ.

ಪ್ರತಿಭಟನೆ ಸ್ವಲ್ಪ ದೂರ ಸಾಗುತ್ತಿದ್ದಂತೆ ತಡೆದು ನಿಲ್ಲಿಸಿದ ಪೊಲೀಸರು ಸೈಕಲ್ ಜಾಥಾದಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಸಹಿತ ಪಕ್ಷದ ಹಲವು ಮುಖಂಡರನ್ನು ವಶಕ್ಕೆ ಪಡೆದು ಕರೆದೊಯ್ದರು.

ಇದಕ್ಕೂ ಮೊದಲು ಸೈಕಲ್ ಜಾಥಾದ ಆರಂಭದ ಸಂದರ್ಭದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಅಲ್ಲಿನವರೆಗೆ ಬಿಜೆಪಿ ಹೋರಾಟ ಮುಂದುವರಿಯಲಿದೆ ಎಂದು ಅವರು ಎಚ್ಚರಿಸಿದರು.

ಇಳಿಸಿ ಇಳಿಸಿ ತೈಲಬೆಲೆ ಇಳಿಸಿ, ತೊಲಗಿಸಿ ತೊಲಗಿಸಿ ರಾಜ್ಯ ಸರಕಾರ ತೊಲಗಿಸಿ, ಬೇಕೇ ಬೇಕು ನ್ಯಾಯ ಬೇಕು, ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರಕ್ಕೆ ಧಿಕ್ಕಾರ, ಅಯ್ಯಯ್ಯೋ ಅನ್ಯಾಯ ಮೊದಲಾದ ಘೋಷಣೆಗಳನ್ನು ಕೂಗುತ್ತ ಸೈಕಲ್ ಜಾಥಾ ನಡೆಯಿತು.

ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

 

 

 

 

LEAVE A REPLY

Please enter your comment!
Please enter your name here