ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದು, ಯಾವುದೇ ಕುಂಟು ನೆಪವೊಡ್ಡಿ ಬೇಜವಾಬ್ದಾರಿ ತೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೇರಿದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಬೆಂಗಳೂರು: ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದು, ಯಾವುದೇ ಕುಂಟು ನೆಪವೊಡ್ಡಿ ಬೇಜವಾಬ್ದಾರಿ ತೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೇರಿದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
‘ಕಲುಷಿತ ನೀರು ಸೇವನೆ ಪ್ರಕರಣಗಳು ಮರುಕಳಿಸಬಾರದು. ಎಲ್ಲ ಜನರಿಗೂ ಶುದ್ಧ ಕುಡಿಯುವ ನೀರು ಒದಗಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಅಗತ್ಯವಿದ್ದರೆ ಅನುದಾನ ನೀಡಲಾಗುವುದು. ಕುಂಟು ನೆಪ ಹೇಳಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಬೇಡಿ. ಅಧಿಕಾರಿಗಳು 24 ಗಂಟೆಯೂ ಎಚ್ಚೆತ್ತು ನೀರಿನ ಸಮಸ್ಯೆ ಬಗೆಹರಿಸಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಚಿವರೊಂದಿಗೆ ಸಂಪರ್ಕದಲ್ಲಿದ್ದು, ನೀರಿನ ಸ್ಥಿತಿಗತಿ ಕುರಿತು ಸೂಕ್ತ ಮಾಹಿತಿ ನೀಡಬೇಕು’ ಎಂದರು.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ ಮತ್ತು ಉಡುಪಿಯ ಎಂಟು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಲ ಜೀವನ್ ಮಿಷನ್ ಪ್ರಗತಿಯನ್ನು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲಿಸಿದ ಅವರು, ಕುಡಿಯುವ ನೀರಿನ ಬಗ್ಗೆ ಸರ್ಕಾರ ಗಮನಹರಿಸಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಲ್ಪ ಪ್ರಮಾಣದ ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಸಮಸ್ಯೆಗಳು ಉಂಟಾಗಿವೆ ಎಂದರು.
ರಾಜ್ಯದಲ್ಲಿ ಜೂ. 10ರಂದು ಮುಂಗಾರು ಆರಂಭವಾಗಿದೆ. ಜೂ. 1ರಿಂದ 11ರವರೆಗೆ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಶೇ 67ರಷ್ಟು ಕೊರತೆ ಉಂಟಾಗಿದೆ. ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಕಲುಷಿತ ನೀರು ದುರ್ಘಟನೆ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ, ತನಿಖೆಗೆ ಆದೇಶ
15 ಜಿಲ್ಲೆಗಳ 322 ಗ್ರಾಮಗಳಲ್ಲಿ ಟ್ಯಾಂಕರ್ ಹಾಗೂ 148 ಗ್ರಾಮಗಳಲ್ಲಿ ಬಾಡಿಗೆ ಖಾಸಗಿ ಬೋರ್‌ವೆಲ್ ಮೂಲಕ ಕುಡಿಯುವ ನೀರು ಒದಗಿಸಲಾಗುತ್ತಿದೆ. ಮುಂಗಾರು ಪೂರ್ವ ಮಳೆಯ ಕೊರತೆಯಿಂದಾಗಿ ಜಲಸಮೃದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿವೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒಗಳು ತಾಲೂಕುಗಳಿಗೆ ಭೇಟಿ ನೀಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಕಾರ್ಯವೈಖರಿ ಬಗ್ಗೆ ನಿಗಾ ಇಡಬೇಕು. ಜಲ ಜೀವನ್ ಮಿಷನ್ ಅಡಿಯಲ್ಲಿ ಅಳವಡಿಸಲಾಗಿರುವ ನೀರಿನ ಪೈಪ್‌ಲೈನ್‌ನ ಗುಣಮಟ್ಟವನ್ನು ಪರಿಶೀಲಿಸಿ, ಒಡೆದು ಹೋದರೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸಮಸ್ಯೆಯಾದ 24 ಗಂಟೆಯೊಳಗೆ ನೀರು ಒದಗಿಸಬೇಕು. ಆಡಳಿತಾತ್ಮಕ ಸಮಸ್ಯೆಗಳಿಂದ ಯಾವುದೇ ವಿಳಂಬವಾಗಬಾರದು. ಅಧಿಕಾರ ಹಂಚುವ ಬಗ್ಗೆಯೂ ಯೋಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಾನುವಾರುಗಳ ಕುಡಿವ ನೀರಿನ ಸಮಸ್ಯೆ ನೀಗಿಸಬೇಕು ಎಂದು ಸೂಚನೆ ನೀಡಿದರು.