ಧಾರವಾಡ: ಧಾರವಾಡದ ಅಣ್ಣಿಗೇರಿಯಲ್ಲಿಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ(Pralhad Joshi) ನೇತೃತ್ವದಲ್ಲಿ ಸಂವಿಧಾನ ಸಮರ್ಪಣಾ ದಿನವನ್ನು(Constitution Day) ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂವಿಧಾನ ದಿನದ ಅಂಗವಾಗಿ ಸಾರ್ವಜನಿಕರು ಹಾಗೂ ಸಿಬ್ಬಂದಿ ವರ್ಗದವರೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂವಿಧಾನದ ಪೀಠಿಕೆಯನ್ನು ಓದಿದರು.
ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಭಾರತ ಸಂವಿಧಾನದ ಪೀಠಿಕೆಯನ್ನು ಓದುವುದು ಹಾಗೂ ಅದರಂತೆ ನಡೆಯುವುದು ಪ್ರತಿ ಭಾರತೀಯನ ಕರ್ತವ್ಯವಾಗಿದೆ ಎಂದು ಕರೆ ನೀಡಿದರು. ದೇಶವಾಸಿಗಳಿಗೆ ಪ್ರಜಾಪ್ರಭುತ್ವದ ಉತ್ಸವದಲ್ಲಿ ಭಾಗವಹಿಸುವಂತೆ ಕೋರಿದ ಸಚಿವ ಪ್ರಲ್ಹಾದ್ ಜೋಶಿಯವರು, ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಜೀವಾಳವೇ ಸಂವಿಧಾನ ಎಂದರು. ಅದರ ಕುರಿತು ತಿಳುವಳಿಕೆ ಪಡೆಯುವುದು ಹಾಗೂ ಅದರ ಸರಿಯಾದ ಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಸಂವಿಧಾನದ ಪ್ರಸ್ತಾವನೆ ಓದುವುದು ನಮ್ಮ ಮೊದಲ ಕರ್ತವ್ಯವಾಗಿದೆ. ಹೀಗಾಗಿ readpreamble.nic.in ಜಾಲತಾಣಕ್ಕೆ ಭೇಟಿ ನೀಡಿ, ಸಂವಿಧಾನದ ಪೀಠಿಕೆಯನ್ನು ಓದಿದ ನಾನು, ಈ ಜಾಲತಾಣದಿಂದಲೇ ನನ್ನ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದೇನೆ. ನೀವು ಕೂಡ ಈ ಜಾಲತಾಣಕ್ಕೆ ಭೇಟಿ ನೀಡಿ ಹಾಗೂ ಸಂವಿಧಾನದ ಪೀಠಿಕೆಯನ್ನು ಓದಿ, ಪ್ರಮಾಣ ಪತ್ರ ಪಡೆಯಿರಿ ಎಂದು ಸಚಿವ ಪ್ರಲ್ಜಾದ್ ಜೋಶಿ ಕರೆ ನೀಡಿದರು.
ಕರ್ನಾಟಕ ದಲಿತ ವಿಮೋಚನಾ ಸಮಿತಿ ಹಾಗೂ ಅಣ್ಣಿಗೇರಿ ತಾಲೂಕು ಸಮಿತಿಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಾವಿತ್ರಿ ಶಿವಪ್ಪ ಪೂಜಾರ್ ಹಾಗೂ ರಾಷ್ಟ್ರಪತಿ ಪದಕ ಪುರಸ್ಕೃತರಾದ ಪೊಲೀಸ್ ಇನ್ಸ್‌ಪೆಕ್ಟರ್ ಧ್ರುವರಾಜ್ ಪಾಟೀಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಎಲೆಮರೆಯ ಕಾಯಿಯಂತೆ ಇರುವ ಸಾಧಕರನ್ನು ಗುರುತಿಸಿ ಗೌರವಿಸಿದ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಇದೇ ವೇಳೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸಚಿವರಾದ ಶ್ರೀ ಶಂಕರ್ ಪಾಟೀಲ್ ಮುನೇನಕೊಪ್ಪ ಹಾಗೂ ಸಮಿತಿಯ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.