ಕಂದಾಯ ಭೂಮಿ ಒತ್ತುವರಿ ತೆರವುಗೊಳಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ಹೇಳಿದ್ದಾರೆ. ಬೆಂಗಳೂರು: ಕಂದಾಯ ಭೂಮಿ ಒತ್ತುವರಿ ತೆರವುಗೊಳಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ಹೇಳಿದ್ದಾರೆ.
ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ, ಕರ್ನಾಟಕದಲ್ಲಿ 2,82,130 ಎಕರೆ ಕಂದಾಯ ಭೂಮಿ ಒತ್ತುವರಿಯಾಗಿದೆ. ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಕರ್ನಾಟಕ ಭೂಕಂದಾಯ ಕಾಯ್ದೆಯಡಿ ನೋಟಿಸ್ ಜಾರಿ ಮಾಡಿ, ಪ್ರಕರಣ ದಾಖಲಿಸಿ ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು,
ಸರಕಾರ ಅತಿಕ್ರಮಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳಿಂದ ವರದಿ ಕೇಳಿದೆ. ಅಧಿಕಾರಿಗಳ ಕೈವಾಡವಿಲ್ಲದೆ ಅತಿಕ್ರಮಣ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಈಗಾಗಲೇ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರವು 2019 ರಿಂದ ವಿವಿಧ ಸಂಸ್ಥೆಗಳಿಗೆ ಗೋಮಾಳ ಭೂಮಿಯನ್ನು ಮಂಜೂರು ಮಾಡಿದ್ದು, ನಿಯಮ ಉಲ್ಲಂಘಿಸಿ ಅಥವಾ ಅನರ್ಹ ಸಂಸ್ಥೆಗಳಿಗೆ ಭೂಮಿ ಮಂಜೂರು ಮಾಡಿರುವ ಪ್ರಕರಣಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ವೇಳೆ ಭೂಮಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶರವಣ ಅವರು ಆಗ್ರಹಿಸಿದರು.