Home ಕರ್ನಾಟಕ ಮಂಗಳೂರು| ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು| ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

24
0

ಮಂಗಳೂರು, ಮಾ.18: ಗೋವಾದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಕೊಕೇನ್ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 35 ಗ್ರಾಂ ಕೊಕೇನ್ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಂಬ್ಲಮೊಗರು ಕೊಳಂಜಹಿಟ್ಟು ಸದಕತ್.ಯು ಯಾನೆ ಶಾನ್ ನವಾಝ್(31) ಮತ್ತು ಅಂಬ್ಲಮೊಗರು ಸೇನರಬೆಟ್ಟು ಅಶ್ಫಕ್ ಯಾನೆ ಅಶ್ಫಾ (25) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ವಶದಲ್ಲಿದ್ದ ದ್ವಿಚಕ್ರ ವಾಹನ ಮತ್ತು ಅದರಲ್ಲಿ ಸಾಗಾಟ ಮಾಡುತ್ತಿದ್ದ 2,72,000 ರೂ. ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೊಕೇನ್, 3 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪಕ, ನಗದು ರೂ. 5560 ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,00,000 ಆಗಿರುತ್ತದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳೂರು ನಗರಕ್ಕೆ ಗೋವಾದಿಂದ ಮಾದಕ ವಸ್ತುವಾದ ಕೊಕೇನ್ ಅನ್ನು ಖರೀದಿಸಿಕೊಂಡು ಸಾಗಾಟ, ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ಶ್ಯಾಮ್ ಸುಂದರ್ ಎಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದ್ವಿಚಕ್ರ ವಾಹನದಲ್ಲಿ ಕೊಕೇನ್ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚಿದರು.

ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ನವಾಝ್ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ಗಳಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here