ಬೆಂಗಳೂರು: ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕಿ, ಮತ ಹಾಕುವಂತೆ ಆಮಿಷವೊಡ್ಡಿರುವ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಬೆಂಗಳೂರಿನ ಆರ್.ಎಂ.ಸಿ ಯಾರ್ಡ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರುವುದನ್ನು ರದ್ದುಗೊಳಿಸುವಂತೆ ಕೋರಿ ಡಿಸಿಎಂ ಡಿಕೆ ಶಿವಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ರಾಜರಾಜೇಶ್ವರಿ ನಗರದ ಅಪಾರ್ಟ್‌ಮೆಂಟ್ ನಲ್ಲಿ ಮತಯಾಚನೆ ಮಾಡುವ ವೇಳೆ ಡಿಕೆ ಶಿವಕುಮಾರ್ ಮತದಾರರಿಗೆ ಬೆದರಿಕೆ ಹಾಕಿ ಅವರನ್ನು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ದೂರು ದಾಖಲಿಸಿತ್ತು. ಜೊತೆಗೆ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿತ್ತು. ಬಳಿಕ ಆ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಡಿಕೆ ಶಿವಕುಮಾರ್ ವಿರುದ್ಧ ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬಳಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ಹೀಗಾಗಿ ಆರ್.ಎಂ.ಸಿ ಯಾರ್ಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದರು. ಹೀಗಾಗಿ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್ ಮೊರೆಹೋಗಿದ್ದು ಅರ್ಜಿ ವಿಚಾರಣೆಗೆ ಬರಬೇಕಿದೆ.