ಬೆಂಗಳೂರು:
ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತರಾದ ಮಂಜುನಾಥ ಪ್ರಸಾದ್ ಅವರಿಗೆ ಕರೆ ಮಾಡಿ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ಮಾಡಿ ಪರಿಸ್ಥಿತಿ ಅವಲೋಕಿಸುವಂತೆ ಸೂಚನೆ ನೀಡಿದ್ದಾರೆ.
ಇಂದು ಮತ್ತು ನಾಳೆ ಸಹ ಬಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಕಟ್ಟೆಚ್ಚರವಾಗಿ ಇರುವಂತೆ ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ನಿನ್ನೆ ಸುರಿದ ಮಳೆಗೆ ಬೆಂಗಳೂರಿಗರು ತತ್ತರಿಸಿಹೋಗಿದ್ದು, ಇಂದು ಕೂಡ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಇನ್ನು 3 ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸೋಮವಾರದವರೆಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.