ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹೂಡಿರುವ ಮಾನಹಾನಿ ಪ್ರಕರಣದ ಅಪರಾಧವನ್ನು ವಿಚಾರಣೆಗೆ ಪರಿಗಣಿಸಿರುವ ಆದೇಶ ಪ್ರಶ್ನಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ದಾಖಲಿಸಿದ್ದ ಖಾಸಗಿ ದೂರು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಐಎಎಸ್ ಅಧಿಕಾರಿಯ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿದೆ
ಈ ಸಂಬಂಧ, ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶನಿವಾರ ಪ್ರಕಟಿಸಿತು. ರೋಹಿಣಿ ಮಾಧ್ಯಮಗಳ ಮುಂದೆ ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿಯೂ ಹಂಚಿಕೊಂಡಿದ್ದಾರೆ ಎಂದು ರೂಪಾ ಮೌದ್ಗಿಲ್ ಬೆಂಗಳೂರಿನ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.
2023ರ ಫೆಬ್ರವರಿ 19ರಂದು ರೋಹಿಣಿ ಸಿಂಧೂರಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯನ್ನು ನಂತರ ‘ಎಕ್ಸ್’ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪಗಳನ್ನು ಮಾಡಿದ್ದಾರೆ ಎಂದು ರೂಪಾ ಆರೋಪಿಸಿದ್ದರು.
ಈ ಹೇಳಿಕೆಯನ್ನು ಸುಮಾರು 1.8 ಲಕ್ಷ ಮಂದಿ ವೀಕ್ಷಿಸಿದ್ದರೆಂದು ದೂರುದಲ್ಲಿ ಉಲ್ಲೇಖಿಸಲಾಗಿದೆ. ಈ ಹೇಳಿಕೆಯ ನಂತರ ತಮಗೆ ವರ್ಗಾವಣೆ ಆಗಿದ್ದು, ಆರು ತಿಂಗಳ ಕಾಲ ಸಂಬಳವಿಲ್ಲದೆ ಹುದ್ದೆ ರಹಿತ ಸ್ಥಿತಿ ಉಂಟಾಯಿತು ಎಂದು ರೂಪಾ ತಿಳಿಸಿದ್ದಾರೆ. ಜೊತೆಗೆ ಕುಟುಂಬದ ಸದಸ್ಯರು ಮಾನಸಿಕ ಯಾತನೆ ಅನುಭವಿಸಿದ್ದಾರೆ ಎಂಬ ಕಾರಣ ನೀಡಿ ಮಾನನಷ್ಟ ಪ್ರಕರಣ ದಾಖಲಿಸಿದ್ದರು.
