ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಾ.16ರಂದು ಕಲಬುರಗಿ ಹಾಗೂ 18ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದು, ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ತಿಳಿಸಿದರು.
ಬುಧವಾರ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಯವರ ಎರಡು ದಿನಗಳ ಪ್ರವಾಸಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾ.16ರಂದು ಕಲಬುರಗಿಯ ಎನ್.ವಿ.ಆಟದ ಮೈದಾನದಲ್ಲಿ ಸಭೆ ನಡೆಯಲಿದೆ. 18ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಅನೇಕ ಗಣ್ಯರು ಬೇರೆ ಬೇರೆ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ಕೊಡಲಿದ್ದಾರೆ ಎಂದು ಅವರು ಹೇಳಿದರು.
ಶೀಘ್ರವೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ: ಚುನಾವಣೆ ಗೆಲುವಿಗೆ ಎಲ್ಲ ಪೂರ್ವಸಿದ್ಧತೆಗಳನ್ನು ಬಿಜೆಪಿ ಮಾಡುತ್ತಿದೆ ಎಂದ ಸುನೀಲ್ ಕುಮಾರ್, ಇವತ್ತು ರಾತ್ರಿ ಅಥವಾ ನಾಳೆ ಕರ್ನಾಟಕದ ಮೊದಲ ಹಂತದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆ ದೃಷ್ಟಿಯಿಂದ 28 ಲೋಕಸಭಾ ಕ್ಷೇತ್ರಗಳನ್ನು 8 ಕ್ಲಸ್ಟರ್ ಗಳನ್ನಾಗಿ ನಾವು ವಿಂಗಡಿಸಿದ್ದೇವೆ. ಸ್ಥಳೀಯ ರಾಜಕೀಯ ಮತ್ತು ಭೌಗೋಳಿಕ ಹಿನ್ನೆಲೆಯನ್ನು ಕಣ್ಮುಂದೆ ಇಟ್ಟುಕೊಂಡು ಆ 8 ಕ್ಲಸ್ಟರ್ ಗಳಲ್ಲಿ ಬೇರೆ ಬೇರೆ ರೀತಿಯ ಕಾರ್ಯಕ್ರಮ ಮತ್ತು ತಂತ್ರಗಾರಿಕೆಗಳನ್ನು ಮಾಡಲಾಗುತ್ತಿದೆ ಎಂದು ಸುನೀಲ್ ಕುಮಾರ್ ತಿಳಿಸಿದರು.