ಬೆಂಗಳೂರು : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಅನುದಾನವು ಮುಸ್ಲಿಮರ ಪಾಲಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಆ್ಯನಿಮೇಟೆಡ್ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲು ಕೆಲವೇ ದಿನಗಳು ಇರುವಾಗ ಕರ್ನಾಟಕ ಬಿಜೆಪಿಯು, ಮುಸ್ಲಿಮರು, ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿ ಮಾಡಿ ಆ್ಯನಿಮೇಟೆಡ್ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಈ ವಿಡಿಯೊ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಅಲ್ಲದೆ, ಈ ವಿಡಿಯೋ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು. ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಈ ದೂರು ನೀಡಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ಮಾಳವಿಯಾ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದೂರು ನೀಡಲಾಗಿತ್ತು. ಈ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿಯ ಮೂವರು ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.