Home ಕರ್ನಾಟಕ ಮೈಸೂರಿನ ಮುಡಾದಲ್ಲಿ 4ಸಾವಿರ ಕೋಟಿ ರೂ. ಗುಳುಂ : ಆರ್.ಅಶೋಕ್ ಆರೋಪ

ಮೈಸೂರಿನ ಮುಡಾದಲ್ಲಿ 4ಸಾವಿರ ಕೋಟಿ ರೂ. ಗುಳುಂ : ಆರ್.ಅಶೋಕ್ ಆರೋಪ

15
0

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ.ದಲಿತರ ಹಣವನ್ನ ಗುಳುಂ ಮಾಡಿರುವ ‘ಸಿದ್ಧ’ಹಸ್ತರು ಈಗ ಮೈಸೂರಿನ ಮುಡಾದಲ್ಲಿ 4ಸಾವಿರ ಕೋಟಿ ರೂ. ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ‘ಕೈ’ ಚಳಕ ಪ್ರದರ್ಶನ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದಾರೆ.

ಮಂಗಳವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ ಉತ್ತರವಿದೆಯೇ?. ತಮ್ಮ ಧರ್ಮಪತ್ನಿ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ?’ ಎಂದು ಪ್ರಶ್ನಿಸಿದ್ದಾರೆ.

ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನ ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ?. 4ಸಾವಿರ ಕೋಟಿ ರೂ. ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನು ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನ ನೇಮಿಸಿ ಪ್ರಕರಣವನ್ನು ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು?’ ಎಂದು ಅಶೋಕ್ ಕೇಳಿದ್ದಾರೆ.

50ಃ50ರ ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು?. ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಫಾರಸ್ಸು ಮಾಡಿದ್ದು ಯಾರು?. ಸಚಿವ ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು?. ನಿಮ್ಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂತಹದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ?’ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

LEAVE A REPLY

Please enter your comment!
Please enter your name here