ಬೆಂಗಳೂರು, ಮಾ. 15: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಅಡಿ ಎಫ್ ಐ ಆರ್ ದಾಖಲಾಗಿದ್ದು, ಈ ಪ್ರಕರಣದ ಹಿಂದೆ ಯಾವುದೇ ರಾಜಕೀಯ ದುರುದ್ದೇಶವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಇಲ್ಲಿನ ಸದಾಶಿವ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ಮಹಿಳೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾನೂನು ರೀತಿಯಲ್ಲಿ ಪೊಲೀಸರು ತನಿಖೆ ನಡೆಸಲಿದ್ದು, ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ ಎಂದು ನಿರಾಕರಿಸಿದರು.
ರಾಜ್ಯದ ಒಬ್ಬ ಮಾಜಿ ಮುಖ್ಯಮಂತ್ರಿ ವಿರುದ್ದ ಪ್ರಕರಣ ದಾಖಲಾಗಿರುವುದು ಅತ್ಯಂತ ಸೂಕ್ಷ್ಮ ವಿಷಯ. ಅಗತ್ಯವಿದ್ದರೆ ಸಂತ್ರಸ್ತ ಮಹಿಳೆಗೆ ರಕ್ಷಣೆ ಕೊಡುತ್ತೇವೆ. ಯಡಿಯೂರಪ್ಪ ಅವರನ್ನು ವಶಕ್ಕೆ ಪಡೆಯುವ ವಿಚಾರ ತನಿಖೆ ಆಧಾರದ ಮೇಲೆ ನಿರ್ಧಾರವಾಗಲಿದೆ ಎಂದು ಅವರು ವಿವರ ನೀಡಿದರು.