ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಗೆ ಈವರೆಗೂ 52 ಮಂದಿ ಸಾವನ್ನಪ್ಪಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ, ಬೆಳೆ ಹಾನಿಯ ವರದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದು, ಕೂಡಲೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಗೆ ಈವರೆಗೂ 52 ಮಂದಿ ಸಾವನ್ನಪ್ಪಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ, ಬೆಳೆ ಹಾನಿಯ ವರದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದು, ಕೂಡಲೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಕರ್ತವ್ಯ ಲೋಪವೆಸಗಿದರೆ ಕಠಿಣ ಕ್ರಮ ಜರುಗಿಸುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ವಿಪತ್ತು ನಿರ್ವಹಣೆ ಕುರಿತು ಚರ್ಚಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದೆ, ಏಪ್ರಿಲ್ ನಿಂದ ಜೂನ್ ವರೆಗೆ ಈ ಮಳೆಯಾಗಲಿದ್ದು, ಈ ಬಾರಿ ವಾಡಿಕೆಗಿಂತ ಶೇಕಡಾ 10 ರಷ್ಟು ಹೆಚ್ಚಾಗಿದೆ. ಇದರಲ್ಲಿ ಇದುವರೆಗೆ ಸುಮಾರು 52 ಜನರು, 331 ಜಾನುವಾರು ಸಾವನ್ನಪ್ಪಿದ್ದು, 20,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ ಮತ್ತು 814 ಮನೆಗಳಿಗೆ ಹಾನಿಯಾಗಿದೆ ಎಂದರು.
ಇದನ್ನೂ ಓದಿ: ಮುಂಗಾರು ಪೂರ್ವ ಮಳೆಯಿಂದ ಹಾನಿ: ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ; ಡಿಸಿ, ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ
ಇವೆಲ್ಲವುಗಳಿಗೆ ತಕ್ಷಣ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು. ಮರ ಬಿದ್ದು ಸಾವನ್ನಪ್ಪಿದವರು, ಗುಡುಗು ಸಿಡಿಲಿನಿಂದ ಸಾವನ್ನಪ್ಪಿದವರು ಅಥವಾ ಮಳೆ ನೀರಿನಿಂದ ಕೊಚ್ಚಿಹೋದ 52 ಮಂದಿಯ ಕುಟುಂಬಕ್ಕೆ ಈಗಾಗಲೇ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅಲ್ಲದೆ, ಜಾನುವಾರುಗಳ ಸಾವು, ಮನೆಗಳಿಗೆ ಉಂಟಾದ ಹಾನಿಯನ್ನು ನಿರ್ಣಯಿಸಲು ಮತ್ತು ತಕ್ಷಣದ ಪರಿಹಾರವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.