ಬೆಂಗಳೂರು: ರಾಜ್ಯದ ಶಾಲೆ ಮತ್ತು ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳ ಮೊಬೈಲ್ ಬಳಕೆಗೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಸುಳಿವು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ.
ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ, ಈ ವಿಷಯದಲ್ಲಿ ಕುಲಪತಿಗಳ ಅಭಿಪ್ರಾಯ ಕೇಳಿದ್ದು, ವಿದ್ಯಾರ್ಥಿಗಳ ಮೊಬೈಲ್ ಬಳಕೆಯನ್ನು ನಿಯಂತ್ರಿಸುವ ಬಗ್ಗೆ ವಿಸಿಗಳು ಸಹ ಒಪ್ಪಿಗೆಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಯುವಕರು ಡ್ರಗ್ಸ್ಗೆ ಬಲಿಯಾಗುತ್ತಿರುವುದು ಹಾಗೂ ಸೋಶಿಯಲ್ ಮೀಡಿಯಾ ಅಡಿಕ್ಶನ್ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ. 16 ವರ್ಷದೊಳಗಿನ ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸಮಯ ಕಳೆಯುತ್ತಿರುವುದರಿಂದ ಅವರ ಓದು ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಅವರು ಹೇಳಿದರು.
ಆಸ್ಟ್ರೇಲಿಯಾ ಸೇರಿದಂತೆ ಕೆಲ ಯುರೋಪಿನ ದೇಶಗಳು ವಿದ್ಯಾರ್ಥಿಗಳ ಮೊಬೈಲ್ ಬಳಕೆಗೆ ಈಗಾಗಲೇ ನಿಯಂತ್ರಣ ಹೇರಿರುವುದನ್ನು ಉದಾಹರಿಸಿದ ಸಿಎಂ, ರಾಜ್ಯದಲ್ಲೂ ಇಂತಹ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದರು.
ಕ್ಯಾಂಪಸ್ಗಳನ್ನು ಡ್ರಗ್ಸ್ ಮುಕ್ತಗೊಳಿಸುವುದು ಹಾಗೂ ಡ್ರಗ್ಸ್ ಮಾಫಿಯಾಗಳಿಗೆ ಕಡಿವಾಣ ಹಾಕುವುದು ಸರ್ಕಾರದ ಆದ್ಯತೆ ಎಂದು ಅವರು ಸ್ಪಷ್ಟಪಡಿಸಿದರು.
ಇದರ ನಡುವೆ ಪೋಷಕರು ಈ ಪ್ರಸ್ತಾಪವನ್ನು ಸ್ವಾಗತಿಸಿದ್ದಾರೆ. ಶಾಲೆಗಳಲ್ಲಿ ಮೊಬೈಲ್ ನಿಷೇಧ ಮಾಡಿದರೆ ಮಕ್ಕಳ ಗಮನ ಓದಿನ ಮೇಲೆ ಹೆಚ್ಚು ಕೇಂದ್ರೀಕೃತವಾಗುತ್ತದೆ ಹಾಗೂ ಅಡಿಕ್ಶನ್ ಕಡಿಮೆಯಾಗುತ್ತದೆ ಎಂದು ಅನೇಕ ಪೋಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಚರ್ಚೆಗಳ ನಂತರ ಸರ್ಕಾರ ಅಧಿಕೃತ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ.
