ರಾಜ್ಯದಲ್ಲಿ ಮುಂಗಾರು ಮಳೆ ಅಭಾವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೆಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿದ್ದು, ಜುಲೈ 15ಕ್ಕೆ ಸಭೆ ನಡೆಯಲಿದೆ. ಸಭೆಯಲ್ಲಿ ಕಲಬುರಗಿ ಬರಪೀಡಿತ ಜಿಲ್ಲೆ ಘೋಷಣೆ… ಕಲಬುರಗಿ: ರಾಜ್ಯದಲ್ಲಿ ಮುಂಗಾರು ಮಳೆ ಅಭಾವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೆಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿದ್ದು, ಜುಲೈ 15ಕ್ಕೆ ಸಭೆ ನಡೆಯಲಿದೆ. ಸಭೆಯಲ್ಲಿ ಕಲಬುರಗಿ ಬರಪೀಡಿತ ಜಿಲ್ಲೆ ಘೋಷಣೆ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಹೇಳಿದರು.
ಕಲಬುರಗಿ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಕಲಬುರಗಿ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರಸ್ತುತ ಮೋಡ ಬಿತ್ತನೆ ಸರ್ಕಾರದ ಮುಂದಿಲ್ಲ. ಮಳೆ 10 ದಿನ ತಡವಾಗಿದ್ದು, ಮುಂದಿನ ಮೂರ್ನಾಲ್ಕು ದಿನದಲ್ಲಿ ಮಳೆ ಬರುವ ಸಾಧ್ಯತೆವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಕಾದು ನೋಡುತ್ತಿದ್ದೇವೆ ಎಂದು ಹೇಳಿದರು.
ಕಲಬುರಗಿ ನಗರದ ಅಪ್ಪನ ಕೆರೆ ಸೌಂದರ್ಯೀಕರಣಕ್ಕೆ ಹಿಂದಿನ ಸರ್ಕಾರದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಪರಿಸರ ಪ್ರಭಾವದ ಮೌಲ್ಯಮಾಪನ ವರದಿ ಪಡೆಯದೇ ಕಾಮಗಾರಿ ಆರಂಭಿಸಿದ್ದು, ಅಲ್ಲಿನ ಪಕ್ಷಿ ಸಂಕುಲಕ್ಕೆ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಬಗ್ಗೆ ತನಿಖೆ ಮಾಡಿ ವರದಿ ನೀಡುವಂತೆ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಇದು ದ್ವೇಷದ ರಾಜಕಾರಣ ಅಲ್ಲ. ಪರಿಸರ ಕಾಳಜಿ ಮತ್ತು ನಮ್ಮ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಸೂಚನೆ ನೀಡಿರುವೆ. ಪರಿಸರ ಪ್ರಭಾವ ಮೌಲ್ಯಮಾಪನ ವರದಿ ಬಂದ ನಂತರ ಕಾಮಗಾರಿ ಮುಂದುವರೆಸುವುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 18,000 ಶಿಕ್ಷಕರ ಹುದ್ದೆ ಸೇರಿ 2.50 ಲಕ್ಷ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದರು.
ಸೋಮವಾರ ಪೆನ್‌ಡ್ರೈವ್ ಬಿಡುಗಡೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿರುವ ಕುರಿತು ಮಾತನಾಡಿ, ಸೋಮವಾರವೇಕೆ ಇಂದೇ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.