ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.
ಶಾಸಕ ಹರೀಶ್ ಪೂಂಜಾ ಅವರು ಕಾಂಗ್ರೆಸ್ ಪರ ಪ್ರಚಾರ ಮಾಡಿದ ಹಿಂದೂ ಕಾರ್ಯಕರ್ತರ ವಿರುದ್ಧ ಆಕ್ರೋಶ ಹೊರಹಾಕಿದರು. ಕಳೆದ ವಾರ ನಡೆದ ಸ್ಥಳೀಯ ಸಮಾರಂಭವೊಂದರಲ್ಲಿ ಮಾತನಾಡಿದ ಈ ಹೇಳಿಕೆಯ ಆಡಿಯೋ ಮತ್ತು ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಹಿಂದೂ ಕಾರ್ಯಕರ್ತ ಸತ್ಯಜಿತ್ ಸುರತ್ಕಲ್ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದರು.
’24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ ಸಿದ್ದರಾಮಯ್ಯನವರಿಗೆ ನೀವು ಮತ ಕೇಳಿದ್ದೀರಿ. ಭಜರಂಗದಳದ ಮೇಲೆ ನಿಷೇಧ ಹೇರಲು ಮುಂದಾಗಿರುವ ಕಾಂಗ್ರೆಸ್‌ಗೆ ಮತ ಯಾಚಿಸಿದ್ದೀರಿ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ’ ಎಂದು ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಅವರ ವಿರುದ್ಧ ಪೊಲೀಸರಿಗೆ ದೂರು ನೀಡಲು ಕಾಂಗ್ರೆಸ್ ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ.
2013 ರಿಂದ 2018ರ ಅವಧಿಯಲ್ಲಿ ಸಿದ್ದರಾಮಯ್ಯನವರ ಆಳ್ವಿಕೆಯಲ್ಲಿ ಕರಾವಳಿ ಕರ್ನಾಟಕ, ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಗಳು ನಡೆದಿವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸುವ ಮೂಲಕ ಆರೋಪಿಗಳನ್ನು ರಕ್ಷಿಸಿದೆ ಎಂದು ಬಿಜೆಪಿ ಆರೋಪಿಸಿದೆ.
ಇದನ್ನೂ ಓದಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ: ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಜೆಪಿ ಇದನ್ನು 2018ರ ಚುನಾವಣಾ ವಿಷಯವಾಗಿಸಿತ್ತು ಮತ್ತು ಕರಾವಳಿ ಪ್ರದೇಶದಲ್ಲಿ ಚುನಾವಣೆಗಳನ್ನು ಗೆದ್ದಿತ್ತು.
ಆಗ ಆರೋಪಿಗಳಿಗೆ ರಕ್ಷಣೆ ನೀಡುವುದನ್ನು ನಿರಾಕರಿಸಿದ್ದ ಸಿದ್ದರಾಮಯ್ಯ, ವೈಯುಕ್ತಿಕ ದ್ವೇಷದಿಂದ ಕೊಲೆ ನಡೆದಿದೆ ಎಂದು ಸಮರ್ಥಿಸಿಕೊಂಡಿದ್ದರು. ಕೋಮುಗಲಭೆಯಲ್ಲಿ ಹತ್ಯೆಯಾಗಿದ್ದಾನೆ ಎನ್ನಲಾದ ಹಿಂದೂ ಯುವಕ ಪರೇಶ್ ಮೇಸ್ತಾ ಆಕಸ್ಮಿಕವಾಗಿ ಸಾವಿಗೀಡಾಗಿದ್ದಾನೆ ಎಂಬುದು ಸಿಬಿಐ ತನಿಖೆಯಿಂದ ತಿಳಿದುಬಂದಿದೆ. ಈ ತನಿಖಾ ವರದಿಯು ಚುನಾವಣಾ ಸಮಯದಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.