Home ಉಡುಪಿ ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಸಚಿವೆ ಲಕ್ಷ್ಮೀ...

ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

35
0
1.2 crore people have come out of poverty through guarantee schemes: Minister Lakshmi Hebbalkar

ಉಡುಪಿ: ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್ ನಲ್ಲಿ ಶೇ. 4 ರಿಂದ 5 ರಷ್ಟು ಅನುದಾನ ಮಾತ್ರ ಬಡವರಿಗೆ ಹಂಚಿಕೆಯಾಗುತ್ತಿತ್ತು. ಈ ಬಾರಿ ಬಜೆಟ್ ‌ನಲ್ಲಿ ಶೇ. 15 ರಷ್ಟು ಅನುದಾನ ಬಡವರಿಗೆ ಹಂಚಿಕೆಯಾಗಿರುವುದು ವಿಶೇಷ. ಇದರಿಂದ ಬಡವರ ಬದುಕು ಸುಧಾರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಡುಪಿಯ ಅಜ್ಜರಕಾಡಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು.

ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್ ನಲ್ಲಿ ಶೇ. 4 ರಿಂದ 5 ರಷ್ಟು ಅನುದಾನ ಮಾತ್ರ ಬಡವರಿಗೆ ಹಂಚಿಕೆಯಾಗುತ್ತಿತ್ತು. ಈ ಬಾರಿ ಬಜೆಟ್ ‌ನಲ್ಲಿ ಶೇ. 15 ರಷ್ಟು ಅನುದಾನ ಬಡವರಿಗೆ ಹಂಚಿಕೆಯಾಗಿರುವುದು ವಿಶೇಷ. ಇದರಿಂದ ಬಡವರ ಬದುಕು ಸುಧಾರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.

ನಮ್ಮ ದೇಶವು ಮೀನುಗಾರಿಕಾ ಉತ್ಪಾದನೆಯಲ್ಲಿ ವಿಶ್ವದಲ್ಲಿಯೇ ಮೂರನೇ ಸ್ಥಾನ ಪಡೆದಿದೆ. ಇದಕ್ಕೆ ಜಿಲ್ಲೆಯ ಮೀನುಗಾರರ ಕೊಡುಗೆಯು ಅಪಾರ. ಮಲ್ಪೆಯ ಸರ್ವಋತು ಮೀನುಗಾರಿಕೆ ಬಂದರನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯ ಆರಂಭಿಕ ಹಂತವಾಗಿ ಸರ್ವೇ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.

ಉಡುಪಿ ಜಿಲ್ಲೆಯ ಕಾನೂನು ಹಾಗೂ ಸುವ್ಯವಸ್ಥೆಗೆ ಕ್ರಮವಹಿಸಿದ್ದು, ಕಾಲಕಾಲಕ್ಕೆ ಸೂಚನೆ, ಸಭೆ ನಡೆಸಿ, ವಿವಿಧ ಕ್ರಮಗಳನ್ನು ಕೈಗೊಂಡು ಅಪರಾಧಿ ಪ್ರಕರಣ ನಿಯಂತ್ರಣ ತಡೆಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಅಪರಾಧಿಕ ಪ್ರಕರಣ ಕಡಿಮೆಯಾಗಿದೆ. ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಸುವ ಪ್ರಮುಖ ವಲಯಗಳಲ್ಲಿ ಒಂದಾದ ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಪ್ರವಾಸೋದ್ಯಮ ನೀತಿ 2024 -29ರ ಮೂಲಕ ಪ್ರವಾಸೋದ್ಯಮ ವಲಯದಲ್ಲಿ ಹೂಡಿಕೆಗೆ ಅನುಕೂಲ ಕಲ್ಪಿಸಲು ಪ್ರೋತ್ಸಾಹಕಗಳನ್ನು ಹಾಗೂ ಸಹಾಯಧನವನ್ನು ಒದಗಿಸುವುದರ ಮೂಲಕ ಹೂಡಿಕೆದಾರರಿಗೆ ಪ್ರೋತ್ಸಾಹಿಸಲಾಗುತ್ತಿದೆ. ಪ್ರವಾಸಿಗರ ಅನುಕೂಲಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಶುದ್ದ ಕುಡಿಯುವ ನೀರು, ರಸ್ತೆ, ವಿದ್ಯುತ್ ಶಕ್ತಿ ಸೌಲಭ್ಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ತ್ಯಾಜ್ಯ ನಿರ್ವಹಣೆ ಘಟಕಗಳು, ಜಲ ಸಂರಕ್ಷಣೆ, ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ‌ಗಳ 3,402 ಗ್ರಾಮಗಳ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಜಲ ಜೀವನ್ ಮಿಷನ್ ಯೋಜನೆಯಡಿ 734.02 ಕೋಟಿ ರೂ. ಗಳಲ್ಲಿ 525 ಕಾಮಗಾರಿ ಕೈಗೊಂಡು ಪ್ರಸ್ತುತ 437 ಕಾಮಗಾರಿಗಳನ್ನು ಪೂರ್ಣಗೊಳಿಸಿದೆ ಎಂದು ಸಚಿವರು ಹೇಳಿದರು.

ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ದೇಶಾಭಿಮಾನ ಮೂಡಿಸುವ ವಿವಿಧ ನೃತ್ಯ ಕಾರ್ಯಕ್ರಮಗಳು ಗಮನ ಸೆಳೆದವು. ಈ ವೇಳೆ ಅಂಗಾಂಗ ದಾನ ಮಾಡಿದ ಕುಟುಂಬದ ಸದಸ್ಯರಿಗೆ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.

ಜೊತೆಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ‘ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಪ್ರತಿಭಾ ಪುರಸ್ಕಾರ’ ಹಾಗು ವಿಕಲಚೇತನರ ಹಾಗೂ ಹಿರಿಯ ಸಬಲೀಕರಣ ಇಲಾಖೆ ವತಿಯಿಂದ ಸವಲತ್ತುಗಳನ್ನು ವಿತರಿಸಲಾಯಿತು.

ಈ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಸುರೇಶ್ ಗುರ್ಮೆ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕರಾವಳಿ ಕಾವಲು ಪಡೆಯ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್, ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here