ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಡಿಕ್ಕಿ, 15 ವರ್ಷದ ಬಾಲಕ ಸಾವು
ಬೆಂಗಳೂರು: ಹೆಣ್ಣೂರು–ಬಾಗಲೂರು ಮುಖ್ಯ ರಸ್ತೆಯಲ್ಲಿ ಖಾಸಗಿ ಬಸ್ ಡಿಕ್ಕಿ ಹೊಡೆದು 15 ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಮೃತ ಬಾಲಕನನ್ನು ವರುಣ್ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಸುಮಾರು 10 ಗಂಟೆ ವೇಳೆಗೆ ಹತ್ತಿರದ ಅಂಗಡಿಗೆ ಹೋಗಿ ಮನೆಗೆ ವಾಪಸ್ ಬರುತ್ತಿದ್ದಾಗ, ವೇಗವಾಗಿ ಬಂದ ಖಾಸಗಿ ಬಸ್ ಬಾಲಕನಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತ ನಡೆದ ಸ್ಥಳದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಭಾಗಶಃ ಬಂದ್ ಮಾಡಲಾಗಿದ್ದ ಕಾರಣ ಸಂಚಾರ ಅಸ್ತವ್ಯಸ್ತವಾಗಿತ್ತು. ಸಮರ್ಪಕ ಟ್ರಾಫಿಕ್ ನಿಯಂತ್ರಣ ಹಾಗೂ ಪೊಲೀಸರ ಕೊರತೆ ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬಸ್ ಚಾಲಕ ಇಮ್ರಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಘಟನೆ ರಸ್ತೆ ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.
