ಮಂಡ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಪೋಕ್ಸೊ ಕಾಯ್ದೆಯಡಿ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ದಂಡವನ್ನು ವಿಧಿಸಿ ಮಂಡ್ಯ ನಗರದ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ತೀರ್ಪು ನೀಡಿದ್ದಾರೆ.
ಮದ್ದೂರು ಪಟ್ಟಣದ ಸೋಮೇಗೌಡರ ಬೀದಿಯ ನಿವಾಸಿ ಸುನಿಲ್‌ಕುಮಾರ್ (28) ಎಂಬಾತ 12 ವರ್ಷದ ಬಾಲಕಿಯನ್ನು ಪುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು.
ಆರೋಪಿ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್‌ಸ್ಪೆಕ್ಟರ್ ಸಂತೋಷ್ ಅವರು ಸಮಗ್ರ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ನೊಂದ ಬಾಲಕಿಗೆ 10.50 ಲಕ್ಷ ಪರಿಹಾರ ನೀಡುವಂತೆ ಆದೇಶಿಸಲಾಗಿದ್ದು, ವಿಶೇಷ ಸರಕಾರಿ ಅಭಿಯೋಜಕರಾದ ಎಂ.ಜೆ.ಪೂರ್ಣಿಮಾ ಸರಕಾರದ ಪರವಾಗಿ ವಾದ ಮಂಡಿಸಿದ್ದರು.