Home Uncategorized 5 ಮತ್ತು 8 ನೇ ತರಗತಿಗೆ ಬೋರ್ಡ್‌ ಪರೀಕ್ಷೆ: ಪ್ರಶ್ನೆ ಪತ್ರಿಕೆ ಬಗ್ಗೆ ಅಫಿಡವಿಟ್‌ ಸಲ್ಲಿಸಲು ...

5 ಮತ್ತು 8 ನೇ ತರಗತಿಗೆ ಬೋರ್ಡ್‌ ಪರೀಕ್ಷೆ: ಪ್ರಶ್ನೆ ಪತ್ರಿಕೆ ಬಗ್ಗೆ ಅಫಿಡವಿಟ್‌ ಸಲ್ಲಿಸಲು  ಸರ್ಕಾರಕ್ಕೆ ಕೋರ್ಟ್ ಸೂಚನೆ

22
0

ಬೋರ್ಡ್‌ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯು ನ್ಯಾಯಮೂರ್ತಿ ಜಿ. ನರೇಂದರ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು. ಬೆಂಗಳೂರು: ರಾಜ್ಯ ಪಠ್ಯಕ್ರಮದ ಶಾಲೆಗಳ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾಗಿರುವ ಪ್ರಶ್ನೆಪತ್ರಿಕೆಗಳಲ್ಲಿ ಪಠ್ಯಕ್ರಮ ಬಿಟ್ಟು ಪ್ರಶ್ನೆಗಳು ಇದೆ ಅಥವಾ ಇಲ್ಲ ಎಂದು ಸ್ಪಷ್ಟಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಬೋರ್ಡ್‌ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯು ನ್ಯಾಯಮೂರ್ತಿ ಜಿ. ನರೇಂದರ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಈ ವೇಳೆ ಅರ್ಜಿದಾರರ ಪರ ವಕೀಲ ಕೆ.ವಿ. ಧನಂಜಯ ವಾದ ಮಂಡಿಸಿ, ಕಲಿಕಾ ಚೇತರಿಕೆ ಯೋಜನೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮಾತ್ರವೇ ಅನ್ವಯ ಆಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ, ಬೋರ್ಡ್‌ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿದೆ. ಕಲಿಕಾ ಚೇತರಿಕೆ ಪಠ್ಯಕ್ರಮ ಕೇವಲ ಸರ್ಕಾರಿ ಶಾಲೆಗಳಿಗೆ ಮಾತ್ರ. ಈ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ . ಹಾಗಾಗಿ, ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್‌ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.

ಅರ್ಜಿದಾರರ ಪರ ವಕೀಲರ ವಾದವನ್ನು ಅಲ್ಲಗಳೆದ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ, ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ. ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಗೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ. ಹಾಗಾಗಿ, ಬೋರ್ಡ್‌ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಅದರಂತೆ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸಮರ್ಥಿಸಿಕೊಂಡರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ರಾಜ್ಯ ಪಠ್ಯಕ್ರಮದ ಶಾಲೆಗಳ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾಗಿರುವ ಪ್ರಶ್ನೆಪತ್ರಿಕೆಗಳಲ್ಲಿ ಪಠ್ಯಕ್ರಮದಿಂದ ಹೊರತಾದ ಯಾವುದಾದರೂ ಪ್ರಶ್ನೆಗಳು ಇದ್ದಾವೇ ಅಥವಾ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ನಿರ್ದೇಶಿಸಿ ವಿಚಾರಣೆಯನ್ನು ಬುಧವಾರಕ್ಕೆ (ಮಾ.15) ಮುಂದೂಡಿತು.

ಮಾ. 13ರಿಂದ ಆರಂಭವಾಗಬೇಕಿದ್ದ ರಾಜ್ಯ ಮಟ್ಟದ ಮೌಲ್ಯಾಂಕನ (ಬೋರ್ಡ್‌) ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಸರ್ಕಾರಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ನಿರ್ದೇಶಿಸಿತ್ತು. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆಯು ಪರೀಕ್ಷೆಗಳನ್ನು ಮುಂದೂಡಿದೆ. ‘ಹೈಕೋರ್ಟ್‌ ಆದೇಶದಂತೆ ಪರೀಕ್ಷೆ ಮುಂದೂಡಿದ್ದು ನ್ಯಾಯಾಲಯ ಅನುಮತಿ ನೀಡಿದರೆ ಮೌಲ್ಯಾಂಕನ ಪರೀಕ್ಷೆ ನಡೆಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು’ ಎಂದು ಹೇಳಿದೆ.

LEAVE A REPLY

Please enter your comment!
Please enter your name here