ಬೆಂಗಳೂರು: ಸಾರಕ್ಕಿ ಕೆರೆ (Sarakki Kere) ಸುತ್ತಮುತ್ತಲಿನ ಒತ್ತುವರಿ ತೆರವುಗೊಳಿಸುವ ಕುರಿತು ಕರ್ನಾಟಕ ಹೈಕೋರ್ಟ್ ನೀಡಿದ ನಿರ್ದೇಶನದ ಹಿನ್ನೆಲೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತರಾದ ಶ್ರೀ ಕೆ.ಎನ್. ರಮೇಶ್ ಅವರು ಇಂದು ಎಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ಹೈಕೋರ್ಟ್ ಆದೇಶದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೆರೆಯ ಸುತ್ತಮುತ್ತಲಿನ ಪರಿಸ್ಥಿತಿಯನ್ನು ಪರಿಶೀಲಿಸಿ, ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಾರಕ್ಕಿ ಕೆರೆ: ಸಾರಕ್ಕಿ ಕೆರೆಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಕೂಡಲೇ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲು ಸೂಚಿಸಲಾಯಿತು. ನ್ಯಾಯಾಲಯದ ನಿರ್ದೇಶನದಂತೆ ಕೆರೆಯ ಬಫರ್ ಜೋನ್ ಗುರುತಿಸಿ, ಅಲ್ಲಿರುವ ಅನಧಿಕೃತ ನಿರ್ಮಾಣಗಳನ್ನು ತಕ್ಷಣವೇ ತೆರವುಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೆರೆಯ ಪರಿಸರ ರಕ್ಷಣೆ ಹಾಗೂ ಹೈಕೋರ್ಟ್ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಉದ್ದೇಶದಿಂದ ಪಾಲಿಕೆ ಅಧಿಕಾರಿಗಳು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಸಭೆಯಲ್ಲಿ ಎಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಹೈಕೋರ್ಟ್ ಆದೇಶದ ಅನುಷ್ಠಾನ ಕುರಿತು ಪ್ರಗತಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
