ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ ಸಿಸಿಎಚ್ ನ್ಯಾಯಾಲಯವು ಮುಕ್ತಾಯಗೊಳಿಸಿದ್ದು, ಅಕ್ಟೋಬರ್ 14ಕ್ಕೆ ತೀರ್ಪು ಕಾಯ್ದಿರಿಸಿದೆ.
ಅಕ್ಟೋಬರ್ 14ಕ್ಕೆ ಪ್ರಕರಣದ ಎ-2 ಆರೋಪಿ ನಟ ದರ್ಶನ್ಗೆ ಜಾಮೀನು ಸಿಗುತ್ತದೆಯೋ ಇಲ್ಲವೋ ಎಂಬುದು ಗೊತ್ತಾಗಲಿದೆ. ಇದೇ ದಿನ ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡ, ಎ-8 ರವಿಶಂಕರ್ ಸೇರಿದಂತೆ ಉಳಿದ ಆರೋಪಿಗಳಿಗೆ ಜಾಮೀನು ಆದೇಶವೂ ಹೊರಬೀಳುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.
ಜಾಮೀನು ಕೋರಿ ಬಂಧನದಲ್ಲಿರುವ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದು, ಆರೋಪಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಸರಕಾರದ ಎಸ್ಪಿಪಿ ಪ್ರಸನ್ನ ಕುಮಾರ್ ವಾದ-ಪ್ರತಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ.